ಉಡುಪಿ, ಜ.6: ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯನ್ನು ಎಲ್ಲಾ ಮತಗಟ್ಟೆ, ತಾಲೂಕು ಕಚೇರಿ, ಉಪ ವಿಭಾಗ ಕಚೇರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ತಮ್ಮ ಹೆಸರುಗಳು ಸರಿಯಾದ ಮಾಹಿತಿಯೊಂದಿಗೆ ಪಟ್ಟಿಯಲ್ಲಿ ಇವೆಯೇ ಎಂಬುದನ್ನು ಪರಿಶೀಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅಂತಿಮ ಮತದಾರರ ಪಟ್ಟಿಯನ್ನು ಹಸ್ತಾಂತರಿಸಿ ಮಾತನಾಡುತ್ತಿದ್ದರು.
ಜಿಲ್ಲೆಯ ವಿಧಾನಸಭಾವಾರು ಅಂತಿಮ ಮತದಾರರ ಪಟ್ಟಿಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,17,890 ಪುರುಷರು, 1,22,914 ಮಹಿಳೆಯರು ಹಾಗೂ 2 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 2,40,806 ಮತದಾರರು, ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,01,959 ಪುರುಷರು, 1,10,025 ಮಹಿಳೆಯರು ಹಾಗೂ 2 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 2,11,986 ಮತದಾರರು, ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,06,782 ಪುರುಷರು, 1,14,839 ಮಹಿಳೆಯರು ಹಾಗೂ 3 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 2,21,624, ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 92,598 ಪುರುಷರು, 1,00583 ಮಹಿಳೆಯರು ಹಾಗೂ 4 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 1,93,185 ಮತ್ತು ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 93,003 ಪುರುಷರು, 1,00,685 ಮಹಿಳೆಯರು ಸೇರಿದಂತೆ ಒಟ್ಟು 1,93,688 ಒಟ್ಟಾರೆ ಜಿಲ್ಲೆಯಲ್ಲಿ 5,12,232 ಪುರುಷರು, 5,49,046 ಮಹಿಳೆಯರು ಹಾಗೂ 11 ಜನ ತೃತೀಯ ಲಿಂಗಿಗಳು ಸೇರಿದಂತೆ 10,61,289 ಮತದಾರರಿರುತ್ತಾರೆ.
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ ನಮೂನೆ -6 ರಲ್ಲಿ 3,998, ನಮೂನೆ-6 ಎ ರಲ್ಲಿ 1, ನಮೂನೆ-8 ರಲ್ಲಿ 1288 ಸೇರಿದಂತೆ ಒಟ್ಟು 5287 ಜನರು ಹೊಸದಾಗಿ ಸೇರ್ಪಡೆಗೆ ಅರ್ಜಿ ಸಲ್ಲಿಸಿ, 5286 ಯುವ ಮತದಾರರು ಹೊಸದಾಗಿ ನೋಂದಣಿಯಾಗಿರುತ್ತಾರೆ. ನಮೂನೆ-7 ರಲ್ಲಿ 7,398 ಅರ್ಜಿಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಹಾಗೂ ನಮೂನೆ-8 ರಲ್ಲಿ ತಿದ್ದುಪಡಿಗಾಗಿ 5499 ಜನರಿಂದ ಅರ್ಜಿಗಳು ಸಲ್ಲಿಕೆಯಾದರೆ, 7398 ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. 5499 ಮತದಾರರ ಹೆಸರನ್ನು ತಿದ್ದುಪಡಿ ಮಾಡಲಾಗಿದೆ ಎಂದರು.
ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಮಾಹಿತಿಯನ್ನು ಸಾರ್ವಜನಿಕರು ಪಡೆಯಲು ಅನುಕೂಲವಾಗುವಂತೆ ವೋಟರ್ ಹೆಲ್ಪ್ಲೈನ್ ನಂಬರ್ 1950 ಇದ್ದು, ಸಾರ್ವಜನಿಕರು ಈಗಾಗಲೇ ಇದರ ಸದುಪಯೋಗವನ್ನು ಪಡೆದುಕೊಂಡಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದರು. ಇದೇ ಜನವರಿ 25 ರಂದು ಜಿಲ್ಲಾ ಮಟ್ಟದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಬೆಳಗ್ಗೆ 10.30 ಕ್ಕೆ ನಡೆಯಲಿದೆ ಎಂದ ಅವರು, ಕಾರ್ಯಕ್ರಮದಲ್ಲಿ ಹೊಸದಾಗಿ ನೋಂದಣಿಯಾದ ಯುವ ಮತದಾರರಿಗೆ ಗುರುತಿನ ಚೀಟಿಯನ್ನು ವಿತರಿಸಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು. ಜಿಲ್ಲೆಯ ಕರಡು ಮತದಾರರ ಪಟ್ಟಿ ಹಾಗೂ ಅವುಗಳ ಸಿ.ಡಿ ಯನ್ನು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ವಿತರಿಸಲಾಯಿತು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ವಾರ್ತಾಧಿಕಾರಿ ಮಂಜುನಾಥ್ ಬಿ., ಬಿ.ಜೆ.ಪಿಯ ಚಂದ್ರಶೇಖರ ಪ್ರಭು, ಕಾಂಗ್ರೇಸ್ನ ಹಬೀಬ್ ಅಲಿ, ಜೆ.ಡಿ.ಎಸ್ನ ಜಯರಾಂ ಆಚಾರ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು.