ಬಾರ್ಕೂರು, ಮಾ.8: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬಾರ್ಕೂರು ಇಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಉಡುಪಿ ಜಿಲ್ಲಾ ಮಟ್ಟದ ಸರ್ಕಾರಿ ಕಾಲೇಜುಗಳ ಪುರುಷರ ವಾಲಿಬಾಲ್ ಪಂದ್ಯಾವಳಿ ನಡೆಯಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜು ಪ್ರಾಂಶುಪಾಲರಾದ ಪ್ರೊ. ಭಾಸ್ಕರ ಶೆಟ್ಟಿ ಸಳ್ವಾಡಿ ಅವರು ಮಾತನಾಡುತ್ತಾ, ಪ್ರತಿಯೊಬ್ಬ ವಿದ್ಯಾರ್ಥಿಯು ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ. ನಿರಂತರ ಅಭ್ಯಾಸದ ಮೂಲಕ ಯಶಸ್ಸು ಗಳಿಸಲು ಸಾಧ್ಯ ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಉದ್ಯಮಿ ಸುಜಯ್ ಶೆಟ್ಟಿ ತೆಕ್ಕಟ್ಟೆ ಮಾತನಾಡುತ್ತಾ, ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಭಾಗವಹಿಸುವುದು ಮುಖ್ಯ, ಕ್ರೀಡೆಯಲ್ಲಿ ಯಶಸ್ಸು ಗಳಿಸಲು ಪೂರ್ವಸಿದ್ದತೆ ಅಗತ್ಯ ಎಂದು ಹೇಳಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಹಿರಿಯ ಪ್ರಾಧ್ಯಾಪಕರಾದ ಡಾ. ಪ್ರಸಾದ ರಾವ್ ಎಂ ಅವರು ಪಂದ್ಯ ವಿಜೇತ ತಂಡಕ್ಕೆ ನಗದು ಬಹುಮಾನ ಘೋಷಿಸಿದರು. ಶೆಟ್ಟಿಗಾರ್ ಇಂಡಸ್ಟ್ರಿ ಗ್ರೂಪ್ಸ್, ರಂಗನಕೆರೆ, ಬಾರ್ಕೂರು ಮಾಲಕ ಬಿ.ಶ್ರೀನಿವಾಸ್ ಶೆಟ್ಟಿಗಾರ್ ಪಂದ್ಯಾವಳಿಗೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ದೈಹಿಕ ಶಿಕ್ಷಣ ನಿರ್ದೇಶಕಿ ಸುಮತಿ ಸ್ವಾಗತಿಸಿ, ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಪಾಪಣ್ಣ ಎನ್.ಎ. ವಂದಿಸಿದರು. ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಲೋಲಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಸಮಾರೋಪ ಸಮಾರಂಭದ ಮುಖ್ಯ ಅತಿಥಿ ರೋಟರಿ ಕ್ಲಬ್, ಬಾರಕೂರು ಅಧ್ಯಕ್ಷರಾದ ಗಣೇಶ್ ಶೆಟ್ಟಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು.
ಫಲಿತಾಂಶ: ಉಡುಪಿ ಜಿಲ್ಲೆಯ ಆರು ತಂಡಗಳು ಭಾಗವಹಿಸಿದ್ದವು. ಅಂತಿಮವಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ತಂಡ ಜಯ ಗಳಿಸಿ ಪ್ರಥಮ ಬಹುಮಾನ ಪಡೆದರೆ, ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಾರ್ಕೂರು ತಂಡ ದ್ವಿತೀಯ ಬಹುಮಾನ ಪಡೆದುಕೊಂಡಿತು.




By
ForthFocus™