ಉಡುಪಿ: ಕನ್ನಡ ನಾಡು ನುಡಿಗೆ ಸೇವೆ ನೀಡುತ್ತಿರುವ ಬೃಹತ್ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ ಕೆಲಸ ಯಾರು ಮರೆಯುವಂತಿಲ್ಲ ಎಂದು ಖ್ಯಾತ ಇತಿಹಾಸ ತಜ್ಞ ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಡಾ. ಜಗದೀಶ್ ಶೆಟ್ಟಿ ಹೇಳಿದರು. ಅವರು ಕ.ಸಾ.ಪ ಸ್ಥಾಪನಾ ದಿನಾಚರಣೆ ಮತ್ತು ಯಕ್ಷಪ್ರೇಮಿ ನಾರಾಯಣ ಸಂಸ್ಮರಣಾರ್ಥ ನೀಡುವ ದತ್ತಿ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭಾಷೆ ಜೊತೆಗೆ ಏಕೀಕರಣಕ್ಕೆ ಒತ್ತು ನೀಡಿದ ಪರಿಣಾಮ ಇಂದು ಉತ್ತಮ ನಾಡನ್ನು ನೋಡುತ್ತಿದ್ದೇವೆ. ಸಾಹಿತ್ಯ ಸಮ್ಮೇಳನಗಳು ಈ ನಾಡಿನ ವಿವಿಧ ವಿಚಾರಗಳನ್ನು ಜನರಿಗೆ ತಲುಪಿಸುವಲ್ಲಿ ಮಹತ್ತರ ಕೆಲಸ ಮಾಡುತ್ತಿವೆ ಎಂದರು. ಈ ಸಂದರ್ಭದಲ್ಲಿ ಯಕ್ಷಗಾನ ಕೇಂದ್ರದ ಗುರುಗಳಾದ ಕೃಷ್ಣಮೂರ್ತಿ ಭಟ್ ರವರಿಗೆ ದತ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು.
ಹಿರಿಯ ನಾಗರಿಕ ವೇದಿಕೆಯ ಅಧ್ಯಕ್ಷ ನಿವೃತ್ತ ಬ್ಯಾಂಕ್ ಅಧಿಕಾರಿ ಸಿ.ಎಸ್ ರಾವ್ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಗೌರವಾಧ್ಯಕ್ಷ ವಿಶ್ವನಾಥ್ ಶೆಣೈ, ಕ.ಸಾ.ಪ ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಭಾಗವಹಿಸಿದ್ದರು.
ಅಧ್ಯಕ್ಷತೆಯನ್ನು ಕ.ಸಾ.ಪ ತಾಲೂಕು ಘಟಕ ಅಧ್ಯಕ್ಷ ರವಿರಾಜ್ ಹೆಚ್.ಪಿ ವಹಿಸಿದ್ದರು. ಕ.ಸಾ.ಪ ಉಡುಪಿ ತಾಲೂಕು, ಯಕ್ಷಗಾನ ಕೇಂದ್ರ ಇಂದ್ರಾಳಿ ಉಡುಪಿ ಮತ್ತು ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಇವರ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. ಗೌರವ ಕಾರ್ಯದರ್ಶಿ ರಂಜಿನಿ ವಸಂತ್ ಸ್ವಾಗತಿಸಿ, ರಾಜೇಶ್ ಭಟ್ ಪಣಿಯಾಡಿ ಪರಿಚಯಿಸಿದರು. ಗೌರವ ಕಾರ್ಯದರ್ಶಿ ಜನರ್ಧನ್ ಕೊಡವೂರು ವಂದಿಸಿದರು. ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು.