ಉಡುಪಿ, ಡಿ.21: ಜಿಲ್ಲೆಯಲ್ಲಿ ತಂಬಾಕು ಉತ್ಪನ್ನಗಳ ಸಾರ್ವಜನಿಕ ಬಳಕೆ ನಿಯಂತ್ರಣ ಕಾಯ್ದೆ (ಕೋಟ್ಪಾ) ಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಈ ನಿಟ್ಟಿನಲ್ಲಿ ತಂಬಾಕು ನಿಯಂತ್ರಣ ತನಿಖಾ ದಳವು ಅನಿರೀಕ್ಷಿತ ದಾಳಿ ನಡೆಸಿ, ತಂಬಾಕು ಉತ್ಪನ್ನ ಮಾರಾಟಕ್ಕೆ ಪ್ರತ್ಯೇಕ ಪರವಾನಿಗೆ ಪಡೆಯದೇ ಇರುವ ಅಂಗಡಿ-ಮುಂಗಟ್ಟುಗಳ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಪಾ-2003 ಕಾಯಿದೆಯ ಕುರಿತ ತೃತೀಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಹಾಗೂ ಶೈಕ್ಷಣಿಕ ಸಂಸ್ಥೆಗಳ 100 ಮೀ. ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ನಿಷೇಧವಿದೆ. ಈ ನಿಯಮ ಮೀರಿ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿ, ಮುಂಗಟ್ಟುಗಳ ಪರವಾನಿಗೆ ರದ್ದುಪಡಿಸಲು ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು ಎಂದ ಅವರು, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಎಲ್ಲಾ ಅಂಗಡಿಗಳು ವಾಣಿಜ್ಯ ಉದ್ದಿಮೆ ಪರವಾನಿಗೆಯ ಜೊತೆಗೆ ತಂಬಾಕು ಉತ್ಪನ್ನ ಮಾರಾಟಕ್ಕೆ ಪ್ರತ್ಯೇಕ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ ಎಂದರು.
ಜಿಲ್ಲಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಗಳು ಜಂಟಿಯಾಗಿ ಪ್ರತೀ ಶಾಲಾ- ಕಾಲೇಜುಗಳನ್ನು ಭೇಟಿ ಮಾಡಿ, “ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆ”ಯ ಮಾನದಂಡಗಳಿಗೆ ಬದ್ದವಾಗಿರುವುದರ ಕುರಿತು ಪರಿಶೀಲಿಸಿ, ವರದಿ ನೀಡುವಂತೆ ಕಳೆದ ಸಭೆಯಲ್ಲಿ ಸೂಚನೆ ನೀಡಲಾಗಿತ್ತು. ಅದರನ್ವಯ ಜಿಲ್ಲೆಯ ಶಿಕ್ಷಣ ಇಲಾಖೆ ವ್ಯಾಪ್ತಿಯ 1069 ಶಾಲೆಗಳಲ್ಲಿ 893 ಶೈಕ್ಷಣಿಕ ಸಂಸ್ಥೆಗಳನ್ನು “ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆ” ಎಂದು ದೃಢೀಕರಿಸಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದ್ದು, ಇದು ಪೂರ್ಣಪ್ರಮಾಣದಲ್ಲಿ ಆಗಬೇಕೆಂದರು.
ಜಿಲ್ಲೆಯಲ್ಲಿ 2025 ರ ಏಪ್ರಿಲ್ ಮಾಹೆಯಿಂದ ಈವರೆಗೆ 44 ಕ್ಕೂ ಹೆಚ್ಚು ಧಿಡೀರ್ ದಾಳಿಗಳನ್ನು ನಡೆಸಿ, ಸೆಕ್ಷನ್ 4, ಸೆಕ್ಷನ್ 6(ಎ) ಹಾಗೂ 6(ಬಿ) ಅಡಿಯಲ್ಲಿ ಒಟ್ಟು 578 ಕ್ಕೂ ಹೆಚ್ಚು ಪ್ರಕರಣವನ್ನು ದಾಖಲಿಸಿಕೊಂಡು 98,550 ರೂ ದಂಡ ವಸೂಲಿ ಮಾಡಲಾಗಿದೆ. ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿಯೂ ಸಹ ಕೋಟ್ಪಾ ಕಾಯಿದೆಯನ್ನು ಉಲ್ಲಂಘಿಸಿದ 110 ಪ್ರಕರಣಗಳಿಂದ 12,450 ರೂ. ದಂಡ ವಸೂಲಿ ಮಾಡಲಾಗಿದೆ ಎಂದ ಅವರು, ಜಿಲ್ಲೆಯಾದ್ಯಂತ ಕೋಟ್ಪಾ ಕಾಯಿದೆಯ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದರು. ಜಿಲ್ಲೆಯ ಕೆಲವು ಗ್ರಾಮ ಪಂಚಾಯತ್‌ಗಳ ಗ್ರಾಮಗಳನ್ನು ಈಗಾಗಲೇ ತಂಬಾಕು ಮುಕ್ತ ಗ್ರಾಮವನ್ನಾಗಿ ಘೋಷಿಸಲಾಗಿದೆ. ಉಳಿದ ಗ್ರಾಮಗಳನ್ನು ಸಹ ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತಿಯ ಜನಪ್ರತಿನಿಧಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸಹಕರಿಸಬೇಕು ಎಂದರು.
ತಂಬಾಕು ಮುಕ್ತ ಯುವ ಅಭಿಯಾನ 3.0. ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಬೀದಿನಾಟಕ ಸೇರಿದಂತೆ ಮತ್ತಿತರ ಚಟುವಟಿಕೆಗಳನ್ನು ಹಮ್ಮಿಕೊಂಡು, ತಂಬಾಕು ಉತ್ಪನ್ನಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಆ ಮೂಲಕ ಯುವಜನರು ತಂಬಾಕು ಸೇವನೆಯ ವ್ಯಸನಕ್ಕೆ ತುತ್ತಾಗುವುದನ್ನು ತಡೆಯುವುದರೊಂದಿಗೆ ಈಗಾಗಲೇ ತಂಬಾಕು ಉತ್ಪನ್ನಗಳನ್ನು ಬಳಸಲು ಪ್ರಾರಂಭಿಸಿರುವವರನ್ನು ವ್ಯಸನದಿಂದ ಹೊರಬರುವಂತೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ಹುಬ್ಬಳ್ಳಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮರಾವ್, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.




By
ForthFocus™