ಉಡುಪಿ, ಫೆ.17: ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯದಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯಡಿ ಹೆಚ್ಚಿನ ಸಂಖ್ಯೆಯ ಅಸಂಘಟಿತ ಕಾರ್ಮಿಕರುಗಳನ್ನು ನೋಂದಣಿ ಮಾಡಿಸುವುದರೊಂದಿಗೆ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು ಎಂದು ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯ ಪ್ರಗತಿ ಪರಿಶೀಲನೆಯ ಕುರಿತು ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಸಂಘಟಿತ ಕಾರ್ಮಿಕರು ತಮ್ಮ ಜೀವನದ ಸಂಧ್ಯಾಕಾಲದಲ್ಲಿ ದುಡಿದು ತಮ್ಮನ್ನು ಪೋಷಿಸಿಕೊಳ್ಳಲು ಆರ್ಥಿಕ ಮೂಲಗಳು ಇರುವುದಿಲ್ಲ. ಇಂತಹ ಅಸಂಘಟಿತ ಕಾರ್ಮಿಕರಿಗೆ ಅವರ ವಯೋವೃದ್ಧ ವೇಳೆಯಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಎಂಬ ಮಹತ್ವಾಕಾಂಕ್ಷಿ ವಂತಿಕೆ ಆಧಾರಿತ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದು, ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ಅಸಂಘಟಿತ ಕಾರ್ಮಿಕರುಗಳು ನೋಂದಾಯಿಸುವುದರೊಂದಿಗೆ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕು ಎಂದರು. ಅಸಂಘಟಿತ ವಲಯದ ಕಾರ್ಮಿಕರನ್ನು ಯೋಜನೆಯಡಿ ನೋಂದಾಯಿಸಲು ಜಿಲ್ಲೆಯಲ್ಲಿ ಈಗಾಗಲೇ ವಿಶೇಷ ನೋಂದಣಿ ಅಭಿಯಾನವನ್ನು ಹಮ್ಮಿಕೊಂಡಿದ್ದು, ಇದು ಮಾರ್ಚ್ 15 ರ ವರೆಗೆ ನಡೆಯಲಿದೆ. 18 ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ತಮ್ಮ ಆಧಾರ್ ಕಾರ್ಡ್, ಆಧಾರ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ, ಬ್ಯಾಂಕ್ ಪಾಸ್ ಪುಸ್ತಕ ಪ್ರತಿ ಹಾಗೂ ಮೊದಲನೇ ತಿಂಗಳ ವಂತಿಕೆಯೊಂದಿಗೆ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿಯಾಗಿ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ ಎಂದ ಅವರು, ಆದಾಯ ತೆರಿಗೆ ಪಾವತಿದಾರರು, ಸಂಘಟಿತ ವಲಯದ ಕಾರ್ಮಿಕರು, ಇ.ಎಸ್.ಐ/ ಪಿ.ಎಫ್ ಯೋಜನೆಗೆ ಒಳಪಟ್ಟವರು ಈ ಯೋಜನೆಗೆ ಅರ್ಹರಿರುವುದಿಲ್ಲ ಎಂದರು. ಅಸಂಘಟಿತ ಕಾರ್ಮಿಕರುಗಳು ಹೆಚ್ಚು ವಾಸಿಸುವ ಪ್ರದೇಶಗಳು, ಕಾರ್ಮಿಕರು ಸೇರುವಂತಹ ವಿವಿಧ ಇಲಾಖೆಗಳ ಸಭೆಗಳಲ್ಲಿ ಈ ಯೋಜನೆಯ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದರೊಂದಿಗೆ ನೋಂದಣಿ ಅಭಿಯಾನ ಯಶಸ್ವಿಗೊಳಿಸುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯ ವಿಶೇಷ ನೋಂದಣಿ ಅಭಿಯಾನದಡಿ ಜಿಲ್ಲೆಗೆ 7275 ಕಾರ್ಮಿಕರನ್ನು ನೋಂದಾಯಿಸಲು ಗುರಿ ನಿಗಧಿಪಡಿಸಲಾಗಿದ್ದು, ಯೋಜನೆ ಪ್ರಾರಂಭದಿಂದ ಈವರೆಗೆ 7225 ಜನ ಅಸಂಘಟಿತ ಕಾರ್ಮಿಕರು ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರುಗಳು ವಿಶೇಷ ನೋಂದಣಿ ಅಭಿಯಾನದಲ್ಲಿ ನೋಂದಣಿ ಮಾಡಿಕೊಳ್ಳುವುದರೊಂದಿಗೆ ನಿಗಧಿಪಡಿಸಿದ ಗುರಿ ಸಾಧನೆಗೆ ಮುಂದಾಗಬೇಕು ಎಂದ ಅವರು, ಮನೆಗೆಲಸ ನಿರ್ವಹಿಸುವ ಮಹಿಳೆಯರು ಹೆಚ್ಚು ಸಂಖ್ಯೆಯಲ್ಲಿ ನೋಂದಾಯಿಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಕಾರ್ಮಿಕ ಅಧಿಕಾರಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್, ಪೌರಾಯುಕ್ತ ಮಹಾಂತೇಶ್ ಹಂಗರಗಿ, ವಿವಿಧ ಜಿಲ್ಲಾ ಮಟ್ಟದ ಹಾಗೂ ಮತ್ತಿತರರು ಉಪಸ್ಥಿತರಿದ್ದರು.




By
ForthFocus™