ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದರೆ ಅದನ್ನು ಎದುರಿಸಲು ಅಗತ್ಯವಿರುವ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚಿಸಿದರು.
ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ, ಜಿಲ್ಲೆಯಲ್ಲಿನ ಕೋವಿಡ್-19, ಡೆಂಗ್ಯೂ ಮತ್ತು ಮಲೇರಿಯಾ ಪ್ರಕರಣಗಳ ಪ್ರಸಕ್ತ ಪರಿಸ್ಥಿತಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಂಡು ಬಂದರೆ ಆ ಪ್ರದೇಶದಲ್ಲಿ ಹೆಚ್ಚಿನ ಟೆಸ್ಟಿಂಗ್ ಮತ್ತು ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚುವ ಕಾರ್ಯವನ್ನು ತಕ್ಷಣದಲ್ಲಿ ಕೈಗೊಂಡು, ಅದು ಇತರರಿಗೆ ಹರಡದಂತೆ ಎಚ್ಚರ ವಹಿಸಿ. ಎಲ್ಲಾ ತಾಲೂಕುಗಳಲ್ಲಿನ ಕೋವಿಡ್ ಕಾರ್ಯಪಡೆಗಳನ್ನು ಮತ್ತೆ ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದ ಅವರು, ಜಿಲ್ಲೆಯಾದ್ಯಂತ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿನ ಕೋವಿಡ್ ಚಿಕಿತ್ಸೆಗೆ ಅಗತ್ಯವಿರುವ ಆಕ್ಸಿನ್ ಕಾನ್ಸನ್‌ಟ್ರೇಟರ್‌ಗಳು, ಆಮ್ಲಜನಕ ತಯಾರಿಕಾ ಮತ್ತು ಶೇಖರಣಾ ಘಟಕಗಳು ಸೇರಿದಂತೆ ಎಲ್ಲಾ ವೈದ್ಯಕೀಯ ಪರಿಕರಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳುವಂತೆ ಸೂಚಿಸಿದರು.
ಪ್ರಸ್ತುತ ಕಾಲೇಜುಗಳು ಆರಂಭಗೊಳ್ಳುತ್ತಿದ್ದು, ಜಿಲ್ಲೆಗೆ ಹೊರರಾಜ್ಯ ಮತ್ತು ಹೊರ ರಾಷ್ಟ್ರಗಳಿಂದ ವಿದ್ಯಾರ್ಥಿಗಳು ಆಗಮಿಸುತ್ತಿದ್ದು, ಅವರ ಮೂಲಕ ಕೋವಿಡ್ ಪ್ರಕರಣಗಳು ಹರಡದಂತೆ ಅಗತ್ಯ ಮುಂಜಾಗ್ರತೆ ವಹಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರು ಕೋವಿಡ್ ಮುನ್ನೆಚ್ಚರಿಕಾ ಲಸಿಕೆ ಪಡೆಯುವ ಕುರಿತಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಮೂಲಕ ಸೂಚನೆ ನೀಡುವಂತೆ ಹಾಗೂ ಮುನ್ನೆಚ್ಚರಿಕಾ ಡೋಸ್ ಪಡೆಯಲು ಬಾಕಿ ಇರುವ 60 ವರ್ಷ ಮೇಲ್ಪಟ್ಟವರನ್ನು ಗುರುತಿಸಿ ಲಸಿಕೆ ನೀಡುವಂತೆ ಹಾಗೂ ಕೋವಿಡ್ ಲಸಿಕಾ ಮೇಳಗಳನ್ನು ಆಯೋಜಿಸಿ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ನೀಡುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಕಳೆದ 10 ದಿನದಲ್ಲಿ 2127 ಕೋವಿಡ್ ಪರೀಕ್ಷೆಗಳನ್ನು ನಡೆಸಿದ್ದು, 17 ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದು, ಪಾಸಿಟಿವಿಟಿ ದರವು 0.80 ರಷ್ಟಿದ್ದು, ಯಾವುದೇ ಸಾವು ಸಂಭವಿಸಿಲ್ಲ. ಜಿಲ್ಲೆಯಲ್ಲಿ ಪ್ರಸ್ತುತ 11 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಮಾಹಿತಿ ನೀಡಿದರು.
ಮಳೆಗಾಲದಲ್ಲಿ ಕಂಡುಬರುವ ಡೆಂಗ್ಯೂ ಮತ್ತು ಮಲೇರಿಯಾ ನಿಯಂತ್ರಣಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ಜಾಗೃತಿ ಮತ್ತು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ ಹಾಗೂ ಸಾರ್ವಜನಿಕರ ಮೊಬೈಲ್‌ಗಳಿಗೆ ಜಾಗೃತಿ ಕುರಿತ ಆಡಿಯೋ ಸಂದೇಶಗಳನ್ನು ಕಳುಹಿಸಲು ಕ್ರಮ ಕೈಗೊಳ್ಳಿ ಮತ್ತು ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಸಾರ್ವಜನಿಕ ಜಾಥಾ ಕಾರ್ಯಕ್ರಮಗಳನ್ನು ಏರ್ಪಡಿಸುವಂತೆ ಸೂಚಿಸಿದರು.
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಡೆಂಗ್ಯೂ ಮತ್ತು ಮಲೇರಿಯಾ ನಿಯಂತ್ರಣ ಕುರಿತಂತೆ ಈಗಾಗಲೇ ಜಾಗೃತಿ ಮೂಡಿಸಲು ಪಿ.ಡಿ.ಓ ಗಳಿಗೆ ಸೂಚನೆಗಳನ್ನು ನೀಡಲಾಗಿದ್ದು, ಶಾಲಾ ವಿದ್ಯಾರ್ಥಿಗಳ ಮೂಲಕ ಮನೆ ಮನೆಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಹೇಳಿದರು.
ಸಭೆಯಲ್ಲಿ ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಪ್ರಶಾಂತ್ ಭಟ್ ಹಾಗೂ ಆರೋಗ್ಯ ಇಲಾಖೆಯ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.