Saturday, September 12, 2026
Saturday, September 12, 2026

ಸರಕಾರದ ನಿಯಮ ಪಾಲಿಸಿದ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಮಾತ್ರ ಅನುಮತಿ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ

ಸರಕಾರದ ನಿಯಮ ಪಾಲಿಸಿದ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಮಾತ್ರ ಅನುಮತಿ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ

Date:

ಉಡುಪಿ, ಮೇ 13: ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಅನುಮತಿ ನೀಡುವಾಗ ಸರಕಾರ ಜಾರಿಗೆ ತಂದಿರುವ ನಿಯಮಗಳನ್ನು ಪಾಲನೆ ಮಾಡಿದ ಸಂಸ್ಥೆಗಳಿಗೆ ಮಾತ್ರ ಅನುಮತಿ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಪಿ.ಸಿ.ಪಿ.ಎನ್.ಡಿ.ಟಿ ಜಿಲ್ಲಾಮಟ್ಟದ ಸಕ್ಷಮ ಪ್ರಾಧಿಕಾರ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೋಂದಣಿ ಮತ್ತು ಕುಂದುಕೊರತೆ ನಿವಾರಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರಕಾರ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವ ಹಾಗೂ ನಿಯಂತ್ರಣದ ಉದ್ದೇಶದಿಂದ ಪಿ.ಸಿ.ಪಿ.ಎನ್.ಡಿ.ಟಿ ಕಾಯಿದೆಯನ್ನು ಜಾರಿಗೆ ತಂದಿದೆ. ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ಯಂತ್ರಗಳನ್ನು ತೆರೆಯಲು ಅರ್ಜಿ ಸಲ್ಲಿಸಿದಾಗ ಪಿ.ಸಿ.ಪಿ.ಎನ್.ಡಿ.ಟಿ ಕಾಯಿದೆಯ ಷರತ್ತುಗಳನ್ನು ಪೂರ್ಣ ಪ್ರಮಾಣದಲ್ಲಿ ಪಾಲನೆ ಮಾಡಿದ್ದಲ್ಲಿ ಮಾತ್ರ ಅವರುಗಳಿಗೆ ಅನುಮತಿ ನೀಡಬೇಕೆಂದು ಸೂಚನೆ ನೀಡಿದರು. ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಕಾಯಿದೆ ಅನ್ವಯ ಕರ್ತವ್ಯ ನಿರ್ವಹಿಸುವ ರೇಡಿಯಾಲಜಿಸ್ಟ್ ವೈದ್ಯರುಗಳ ವಿವರಗಳನ್ನು ತಪ್ಪದೇ ಪ್ರದರ್ಶಿಸಬೇಕು. ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಸರಕಾರದ ಅನುಮತಿ ಪತ್ರವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ನಿಯಮಾನುಸಾರ ಅಗತ್ಯ ರಿಜಿಸ್ಟರ್‌ಗಳ ನಿರ್ವಹಣೆಯನ್ನು ವ್ಯವಸ್ಥಿತವಾಗಿ ಮಾಡಬೇಕು ಎಂದರು.

ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಸ್ಕ್ಯಾನಿಂಗ್ ಯಂತ್ರಗಳ ಬದಲಾವಣೆ ಮಾಡುವುದು ಅಥವಾ ಬೇರೆ ರೇಡಿಯಾಲಜಿಸ್ಟ್ ವೈದ್ಯರನ್ನು ಬದಲಾವಣೆ ಮಾಡುವಾಗ ಜಿಲ್ಲಾ ಮಟ್ಟದ ಸಕ್ಷಮ ಪ್ರಾಧಿಕಾರದಿಂದ ಅನುಮತಿಯನ್ನು ಪಡೆಯಬೇಕು. ಒಂದೊಮ್ಮೆ ಪಡೆಯದಿದ್ದರೆ ಅವರ ಮೇಲೆ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಬೇಕು ಎಂದರು. ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಹಚ್ಚುವುದು, ಹತ್ಯೆ ಮಾಡುವುದು ಕಾನೂನಿನ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಈ ಬಗ್ಗೆ ಜಿಲ್ಲಾ ಮಟ್ಟದ ಸಮಿತಿಗಳು ಎಚ್ಚರವಹಿಸಬೇಕು. ಒಂದೊಮ್ಮೆ ಕಾಯ್ದೆಯನ್ನು ಉಲ್ಲಂಘಿಸಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು. ರೋಗಿಗಳು ತಪಾಸಣೆಗಾಗಿ ಸ್ಕ್ಯಾನಿಂಗ್ ಕೇಂದ್ರಗಳಿಗೆ ಬಂದಂತಹ ಸಂದರ್ಭದಲ್ಲಿ ವೈದ್ಯರುಗಳ ಆಯ್ಕೆಗಳನ್ನು ಮಾಡಲು ಅನುಕೂಲ ಮಾಡಿಕೊಡುವುದರ ಜೊತೆಗೆ ಗಂಟೆಗಟ್ಟಲೇ ಕಾಯಿಸದೇ ತಪಾಸಣೆಗಳನ್ನು ಅಲ್ಪ ಕಾಲದಲ್ಲಿಯೇ ಪಡೆಯುವಂತೆ ಆಗಬೇಕು ಎಂದರು.

ಪಿ.ಸಿ.ಪಿ.ಎನ್.ಡಿ.ಟಿ ಜಿಲ್ಲಾ ಪರಿಶೀಲನಾ ಮತ್ತು ತಪಾಸಣಾ ಸಮಿತಿ ಸದಸ್ಯರು ಮೂರು ತಿಂಗಳ ಒಳಗಾಗಿ ಜಿಲ್ಲೆಯ ಎಲ್ಲಾ ನೋಂದಾಯಿತ ಸ್ಕಾö್ಯನಿಂಗ್ ಸೆಂಟರ್‌ಗಳ ಆಸ್ಪತ್ರೆಗಳಿಗೆ ಕಡ್ಡಾಯವಾಗಿ ಭೇಟಿ ನೀಡುವುದರೊಂದಿಗೆ ಪಿ.ಸಿ.ಪಿ.ಎನ್.ಡಿ.ಟಿ ಕಾಯ್ದೆಯ ಅನುಷ್ಠಾನದಲ್ಲಿ ಯಾವುದೇ ನ್ಯೂನ್ಯತೆಗಳು ಕಂಡುಬಂದಲ್ಲಿ ಅಂತಹ ಸ್ಕ್ಯಾನಿಂಗ್ ಸೆಂಟರ್ ಹಾಗೂ ಆಸ್ಪತ್ರೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು. ಜಿಲ್ಲೆಯಲ್ಲಿ 2025-26 ನೇ ಸಾಲಿನಲ್ಲಿ 1000 ಗಂಡು ಮಕ್ಕಳಿಗೆ 983 ಹೆಣ್ಣು ಮಕ್ಕಳಿದ್ದಾರೆ. ಹೆಣ್ಣು ಮಕ್ಕಳ ಲಿಂಗಾನುಪಾತ ಕಡಿಮೆ ಇರುವುದರಿಂದ ಆಗುವ ಸಾಮಾಜಿಕ ತೊಂದರೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದರು.

ತಾಲೂಕು ಪ್ರಾಧಿಕೃತ ಅಧಿಕಾರಿಗಳ ಪರಿಶೀಲನಾ ಸಮಿತಿಯು 2025 ರ ಸೆಪ್ಟಂಬರ್ ನಿಂದ ಏಪ್ರಿಲ್ 2026 ರ ವರೆಗೆ ಉಡುಪಿಯ 120, ಕುಂದಾಪುರದ 94 ಹಾಗೂ ಕಾರ್ಕಳದ 120 ಖಾಸಗಿ ಆರೋಗ್ಯ ಸಂಸ್ಥೆಗಳಿಗೆ ಭೇಟಿ ನೀಡಿ, ಅಗ್ನಿ ನಿರೋಧಕ ಸಾಧನಗಳು ಇಲ್ಲದೇ ಇರುವ ಬಗ್ಗೆ ಹಾಗೂ ಕೆ.ಪಿ.ಎಂ.ಇ ಕೆಲವು ನಿಯಮಾವಳಿಗಳನ್ನು ಪಾಲಿಸದೇ ಇರುವ ಕಾರಣ ಕ್ರಮವಾಗಿ 102, 248 ಹಾಗೂ 65 ಆರೋಗ್ಯ ಸಂಸ್ಥೆಗಳಿಗೆ ನೋಟೀಸ್ ನೀಡಲಾಗಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀರಾಮ್ ರಾವ್ ಕೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹಣ್ಯ, ಪೌರಾಯುಕ್ತ ಮಹಾಂತೇಶ್ ಹಂಗರಗಿ, ತಾಲೂಕು ವೈದ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!