ಬಾರ್ಕೂರು, ಮೇ 22: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬಾರಕೂರಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ವಾಣಿಜ್ಯ ಸಂಘ ಹಾಗೂ ನಿರ್ವಹಣಾಶಾಸ್ತ್ರ ವಿಭಾಗದ ವತಿಯಿಂದ, ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಘಟಕದ ಸಹಯೋಗದೊಂದಿಗೆ ಅಂತಿಮ ವರ್ಷದ ಬಿ.ಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳಿಗಾಗಿ ಉದ್ಯಮಶೀಲ ದಿನಾಚರಣೆಯನ್ನು ಆಯೋಜಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಮುಖ್ಯ ಅತಿಥಿ ಪ್ರತಾಪ್ ಹೆಗ್ಡೆ ಮಾರಾಳಿ, ಸ್ವಂತ ಉದ್ಯಮ ಸ್ಥಾಪನೆ ಸಂದರ್ಭದಲ್ಲಿ ಎದುರಾಗಬಹುದಾದ ವಿವಿಧ ಸನ್ನಿವೇಶಗಳು, ಸವಾಲುಗಳು ಹಾಗೂ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಉದ್ಯಮಶೀಲತೆ ಇಂದಿನ ಯುವಜನತೆಗೆ ಸ್ವಾವಲಂಬನೆಯ ದಾರಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಭಾಸ್ಕರ ಶೆಟ್ಟಿ ಎಸ್. ಅವರು, ಕಾಲೇಜಿನಲ್ಲಿ ನಡೆಯುವ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿವೆ ಎಂದು ತಿಳಿಸಿದರು.
ವಾಣಿಜ್ಯಶಾಸ್ತ್ರ ವಿಭಾಗದ ಡಾ. ರಾಧಾಕೃಷ್ಣ ನಾಯಕ್ ಅವರು ಕಾರ್ಯಕ್ರಮದ ಹಿನ್ನೆಲೆ ಹಾಗೂ ಉದ್ದೇಶವನ್ನು ವಿವರಿಸಿದರು. ನಿರ್ವಹಣಾ ಶಾಸ್ತ್ರ ವಿಭಾಗದ ವೀರೇಶ್ ಮಠಪತಿ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಸುಮಾ ಟಿ.ಕೆ. ವಂದಿಸಿದರು. ಪ್ರಥಮ ಬಿ.ಕಾಂ ವಿದ್ಯಾರ್ಥಿನಿ ಸಿಂಚನಾ ಕಾರ್ಯಕ್ರಮ ನಿರೂಪಿಸಿದರು. ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕಿ ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಶೋಭಾ ಆರ್. ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ವಿವಿಧ ಉದ್ಯಮ ಮಾದರಿಗಳನ್ನು ಪ್ರಾಯೋಗಿಕವಾಗಿ ನಡೆಸಿ, ಉದ್ಯಮ ನಿರ್ವಹಣೆಯಲ್ಲಿ ಎದುರಾಗುವ ಅವಕಾಶಗಳು ಮತ್ತು ಸವಾಲುಗಳ ಕುರಿತು ಅರಿವು ಪಡೆದುಕೊಂಡರು. ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದದವರು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು. ಉಪನ್ಯಾಸಕರಾದ ಲೋಲಾಕ್ಷಿ, ಅನಿಲ್ ಕುಮಾರ್ ಕೆ. ವೈ., ಗುಣಪ್ರಿಯ, ಆಶಿಶ್ ಶೆಟ್ಟಿ, ಶ್ರೀಧರ್ ಗಾಣಿಗ ಹಾಗೂ ಇತರ ಉಪನ್ಯಾಸಕ ಮತ್ತು ಉಪನ್ಯಾಸಕೇತರ ಸಿಬ್ಬಂದಿ ಉಪಸ್ಥಿತರಿದ್ದರು.




By
ForthFocus™