ಉಡುಪಿ: ಶ್ರೇಷ್ಠ ದಾನವಾದ ರಕ್ತದಾನದಿಂದ ಆಪತ್ತಿನಲ್ಲಿರುವಂತವರ ಜೀವ ರಕ್ಷಣೆ ಮಾಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಹೇಳಿದರು.
ಅವರು ಇಂದು ಚಿಟ್ಪಾಡಿಯ ಸೈಂಟ್ ಮೇರಿಸ್ ಖಾಸಗಿ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟಿಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ರಿ.), ಅಪ್ಪು ಅಭಿಮಾನಿಗಳ ಬಳಗ, ರಕ್ತನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ ಹಾಗೂ ಸೈಂಟ್ ಮೇರಿಸ್ ಖಾಸಗಿ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ ಚಿಟ್ಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಆಯೋಜಿಸಿದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ಅತೀ ಹೆಚ್ಚು ಬಾರಿ ರಕ್ತದಾನ ಮಾಡಿರುವ ದಾನಿಗಳಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ, ಸ್ವಯಂ ರಕ್ತದಾನ ಮಾಡಿ ಮಾತನಾಡಿದರು.
ಆರೋಗ್ಯವಂತ ಮನುಷ್ಯನು ರಕ್ತದಾನ ಮಾಡಲು ಅರ್ಹನಾಗಿದ್ದು, ಎರಡು ಮೂರು ತಿಂಗಳಿಗೊಮ್ಮೆ ಒಂದು ಯೂನಿಟ್ ರಕ್ತದಾನ ಮಾಡುವುದರಿಂದ ದೇಹದಲ್ಲಿ ಹೊಸ ರಕ್ತ ಉತ್ಪಾದನೆಯಾಗಿ ಚೈತನ್ಯಶೀಲರಾಗಿ ಇರಲು ಸಾಧ್ಯವಾಗುತ್ತದೆ ಎಂದರು.
ಹಿಂದಿನ ದಿನಗಳಲ್ಲಿ ಜನರು ರಕ್ತದಾನ ಮಾಡಲು ಯೋಚಿಸುತ್ತಿದ್ದರು. ರಕ್ತದಾನದ ಮಹತ್ವ ಹಾಗೂ ರಕ್ತದಾನ ಮಾಡುವುದರಿಂದ ಆರೋಗ್ಯಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎಂಬ ಅರಿವನ್ನು ಇತ್ತೀಚಿನ ದಿನಗಳಲ್ಲಿ ಹೊಂದುವುದರೊಂದಿಗೆ ಹೆಚ್ಚು ಹೆಚ್ಚು ಜನರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗುತ್ತಿದ್ದಾರೆ ಎಂದರು.
ರಕ್ತದಾನ ಶಿಬಿರಗಳನ್ನು ಹೆಚ್ಚಾಗಿ ನಡೆಸುವುದರಿಂದ ಯುವಜನರಲ್ಲಿ ರಕ್ತದಾನದ ಅರಿವು ಮೂಡಿಸಿ, ಅವರಿಂದ ಪಡೆದ ರಕ್ತವನ್ನು ಅನಾರೋಗ್ಯಸ್ಥರ ಬೇಡಿಕೆಗೆ ಅನುಗುಣವಾಗಿ ಪೂರೈಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಸುಬ್ರಹ್ಮಣ್ಯ ಶೇರೆಗಾರ್ ಮಾತನಾಡಿ, ಸರ್ಕಾರಿ ನೌಕರರ ಸಂಘವು ಕಳೆದ 15 ವರ್ಷಗಳಿಂದ ಸತತವಾಗಿ ರಕ್ತದಾನ ಶಿಬಿರವನ್ನು ಆಯೋಜಿಸುವ ಮೂಲಕ ರಕ್ತದಾನಕ್ಕೆ ವಿಶೇಷ ಪ್ರಾಮುಖ್ಯತೆ ನೀಡಿದೆ ಎಂದರು.
ಲಯನ್ಸ್ ಕ್ಲಬ್‌ನ ಅಧ್ಯಕ್ಷ ರವಿರಾಜ್ ಮಾತನಾಡಿ, ರಕ್ತದಾನದ ಜೊತೆಗೆ ನೇತ್ರದಾನ ಮಾಡುವುದು ಒಂದು ಪ್ರಮುಖ ಕಾರ್ಯವಾಗಿದೆ. ಮೂಢನಂಬಿಕೆಗಳಿಂದಾಗಿ ಇಂತಹ ದಾನಗಳನ್ನು ಮಾಡಲು ಹಿಂದೇಟು ಹಾಕುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಸ್ವಯಂ ಪ್ರೇರಿತರಾಗಿ ದಾನ ಮಾಡಲು ಮುಂದೆ ಬರುತ್ತಿದ್ದಾರೆ ಎಂದರು.
ಸೈಂಟ್ ಮೇರಿಸ್ ವಿದ್ಯಾಸಂಸ್ಥೆಯ ಸಂಚಾಲಕ ಫಾ. ಚಾರ್ಲ್ಸ್ ಮಿನೆಜಸ್ ಮಾತನಾಡಿ, ಅನಾರೋಗ್ಯ ಹೊಂದಿ ರಕ್ತದ ಅವಶ್ಯಕತೆ ಇರುವಂತಹ ಕಷ್ಟದ ಸಂದರ್ಭದಲ್ಲಿ ರಕ್ತದಾನದ ಮಹತ್ವ ಅರ್ಥವಾಗುತ್ತದೆ ಎಂದ ಅವರು, ಪ್ರತಿಯೊಬ್ಬರ ಜೀವನದಲ್ಲಿ ರಕ್ತ ಅವಶ್ಯಕ. ಈ ಶ್ರೇಷ್ಠದಾನವನ್ನು ಮಾಡಿ ಸದೃಢ ಸಮಾಜ ನಿರ್ಮಾಣವಾಗಬೇಕು ಎಂದರು. ಇದೇ ಸಂದರ್ಭದಲ್ಲಿ ಹೆಚ್ಚು ಬಾರಿ ರಕ್ತದಾನ ಮಾಡಿದ ಗುರುಚರಣ ಕಾರ್ವಿ, ಪುರುಷೋತ್ತಮ, ಹರಿಶ್ಚಂದ್ರ ಪೂಜಾರಿ ಹಾಗೂ ಶ್ಮಿತಾ ಶರತ್ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮರಾವ್, ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ವೀಣಾ ಕುಮಾರಿ, ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಡಾ. ಪ್ರೇಮಾನಂದ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರೆಗಾರ್ ಮತ್ತಿತರರು ಉಪಸ್ಥಿತರಿದ್ದರು. ಪ್ರಭಾರ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಪ್ರಶಾಂತ್ ಭಟ್ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.
ಆಲಂದೂರ್ ಮಂಜುನಾಥ್ ನಿರೂಪಿಸಿದರು, ಸೈಂಟ್ ಮೇರಿಸ್ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಜೆ. ವಿಜಯ ಡಿಸೋಜಾ ವಂದಿಸಿದರು. ರಕ್ತದಾನ ಶಿಬಿರದಲ್ಲಿ 72 ಯೂನಿಟ್ ರಕ್ತವನ್ನು ರಕ್ತದಾನಿಗಳಿಂದ ಸಂಗ್ರಹಿಸಲಾಯಿತು.