ತೆಂಕನಿಡಿಯೂರು, ಅ.11: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಐಕ್ಯೂಎಸಿ ಹಾಗೂ ಅಭ್ಯುದಯ ಸಮಾಜಕಾರ್ಯ ವೇದಿಕೆ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಕಾಲೇಜಿನ ಎವಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ಲತಾ ನಾಯಕ್, ಕೋವಿಡ್ ನಂತರದ ದಿನಗಳಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚಿನ ಆದ್ಯತೆ ನೀಡುವ ಪರಿಸ್ಥಿತಿ ನಿರ್ಮಾಣವಾಗಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಿ ಆರೋಗ್ಯವಂತ ಜೀವನಶೈಲಿ ನಡೆಸಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಕರೆ ನೀಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲರಾದ ಪ್ರೊ. ನಿತ್ಯಾನಂದ ವಿ. ಗಾಂವ್ಕರ್ ಇವರು, ಮಾನಸಿಕ ಆರೋಗ್ಯದ ಬಗ್ಗೆ ಮುಕ್ತವಾಗಿ ಚರ್ಚೆಯಾದರೆ ಮಾತ್ರ ಸೂಕ್ತ ಚಿಕಿತ್ಸೆ ಕಂಡುಕೊಳ್ಳಲು ಸಾಧ್ಯ. ಪ್ರಸ್ತುತ ಕಾಲಘಟ್ಟದಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಯುವಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಕಾರ್ಯ ಆಗಬೇಕಿದೆ ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಮನೋವೈದ್ಯರಾದ ಡಾ. ಶಶಾಂಕ್ ಎಸ್. ಶೆಟ್ಟಿ ಅವರು ಮಾತನಾಡುತ್ತಾ, ಯುವಜನತೆ ಮಾದಕ ವ್ಯಸನದಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ತಿಳುವಳಿಕೆ ಹೊಂದುವ ಮೂಲಕ ಅವುಗಳಿಂದ ದೂರವಿರಬೇಕು. ಮಾನಸಿಕ ಆರೋಗ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿದರೆ ದೈಹಿಕ ಹಾಗೂ ಮಾನಸಿಕ ಆರೋಗ್ಯದಲ್ಲಿ ಸಮತೋಲನ ಕಾಪಾಡಲು ಸಾಧ್ಯವಾಗುತ್ತದೆ ಎಂದರು.
ಅಭ್ಯುದಯ ಸಮಾಜಕಾರ್ಯ ವೇದಿಕೆಯ ಸಂಯೋಜಕಿ ಸುಷ್ಮಾ ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರೋಗ್ಯ ಮೇಲ್ವಿಚಾರಣಾಧಿಕಾರಿ ಹೆಚ್. ನಾಯ್ಕರ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ ಇಲ್ಲಿನ ಸೈಕಾಟ್ರಿಕ್ ಸೋಶಿಯಲ್ ವರ್ಕರ್ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಕ್ಲಿನಿಕಲ್ ಸೈಕೋಲಾಗಿಸ್ಟ್ ಕ್ಯಾಥರಿನ್ ಜೆನಿಫರ್, ಸೈಕಾಟ್ರಿಕ್ ಸೋಶಿಯಲ್ ವರ್ಕರ್ ವಸಂತಿ ಆರ್ ನಾಯಕ್, ಸ್ನಾತಕೋತ್ತರ ವಿಭಾಗದ ಶೈಕ್ಷಣಿಕ ಸಲಹೆಗಾರರಾದ ಡಾ. ಶ್ರೀಧರ್ ಭಟ್, ಸ್ನಾತಕೋತ್ತರ ಸಮಾಜಕಾರ್ಯ ಸಂಯೋಜಕಿ ಡಾ. ಶ್ರೀದೇವಿ ಕೆ., ಅಭ್ಯುದಯ ಸಮಾಜಕಾರ್ಯ ವೇದಿಕೆ ಸಹಸಂಯೋಜಕ ಡಾ. ಗಣೇಶ್ ಪ್ರಸಾದ್ ಜಿ. ನಾಯಕ್, ಅಭ್ಯುದಯ ಸಮಾಜಕಾರ್ಯ ವೇದಿಕೆ ಅಧ್ಯಕ್ಷರಾದ ರಾಜೇಶ್, ಬೋಧಕ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದ್ವಿತೀಯ ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿನಿ ಪ್ರವಿತ್ರಾ ಸ್ವಾಗತಿಸಿ, ದ್ವಿತೀಯ ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿ ಶಾನ್ ಪೀಟರ್ ವಂದಿಸಿದರು. ದ್ವಿತೀಯ ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿನಿ ಪ್ರತೀಕ್ಷಾ ಕಾರ್ಯಕ್ರಮ ನಿರೂಪಿಸಿದರು.




By
ForthFocus™