ಕಾರ್ಕಳ, ನ.9: ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳದ ಸಪ್ತಸ್ವರ ವೇದಿಕೆಯಲ್ಲಿ ವಿದ್ಯಾರ್ಥಿಗಳಿಗಾಗಿ ‘ಪ್ರಸ್ತುತ ಕನ್ನಡ ನಾಡುನುಡಿಯ ಅಸ್ಮಿತೆಯಲ್ಲಿ ವಿದ್ಯಾರ್ಥಿಗಳ ಪಾತ್ರ’ ಕಾರ್ಯಕ್ರಮ ಆಯೋಜಿಸಲಾಯಿತು. ಮುಖ್ಯ ಅತಿಥಿ ಡಾ. ಎಚ್.ಎಸ್. ಸತ್ಯನಾರಾಯಣ ಅವರು ಮಾತನಾಡಿ, ಕನ್ನಡ ಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ, ಪರಂಪರೆ, ಇತಿಹಾಸ ಮತ್ತು ಅಸ್ಮಿತೆಯ ಪ್ರತೀಕವಾಗಿದೆ ಎಂದು ತಿಳಿಸಿದರು. ಆಧುನಿಕತೆ ಮತ್ತು ಜಾಗತೀಕರಣದ ಪ್ರಭಾವದ ನಡುವೆಯೂ ಕನ್ನಡ ಭಾಷೆಯ ಮೇಲಿನ ಅಭಿಮಾನವನ್ನು ಉಳಿಸಿಕೊಳ್ಳುವುದು ಇಂದಿನ ಯುವಜನತೆಯ ಜವಾಬ್ದಾರಿಯಾಗಿದೆ ಎಂದು ಹೇಳುತ್ತಾ ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ ಮತ್ತು ನೆಲದ ಬಗೆಗಿನ ಅಭಿಮಾನವನ್ನು ಜಾಗೃತಗೊಳಿಸಿದರು. ಕನ್ನಡ ಭಾಷೆ ಸಾವಿರಾರು ವರ್ಷಗಳ ಇತಿಹಾಸ, ಶ್ರೀಮಂತ ಸಾಹಿತ್ಯ ಪರಂಪರೆ ಹಾಗೂ ವೈವಿಧ್ಯಮಯ ಸಂಸ್ಕೃತಿಯನ್ನು ತನ್ನ ಒಡಲಲ್ಲಿ ಇಟ್ಟುಕೊಂಡಿರುವ ಹೆಮ್ಮೆಯ ಭಾಷೆಯಾಗಿದೆ.ಇಂದಿನ ಯುಗದಲ್ಲಿ ಇಂಗ್ಲಿಷ್ ಸೇರಿದಂತೆ ಅನೇಕ ಭಾಷೆಗಳನ್ನು ಕಲಿಯುವುದು ಅಗತ್ಯವೇ ಹೊರತು, ಅದಕ್ಕಾಗಿ ಮಾತೃಭಾಷೆಯನ್ನು ಕಡೆಗಣಿಸಬಾರದು. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಕನ್ನಡದಲ್ಲಿಯೂ ಅಭಿವ್ಯಕ್ತಿಸುವ ಪ್ರಯತ್ನ ಮಾಡಬೇಕು. ಡಿಜಿಟಲ್ ಮಾಧ್ಯಮ, ಸಾಮಾಜಿಕ ಜಾಲತಾಣಗಳು ಹಾಗೂ ಆಧುನಿಕ ತಂತ್ರಜ್ಞಾನವನ್ನು ಕನ್ನಡದ ಪ್ರಚಾರ ಮತ್ತು ಪ್ರಸಾರಕ್ಕೆ ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು. ಇಂತಹ ಭಾಷೆಯ ವಾರಸುದಾರರಾದ ನಾವುಗಳು ಕನ್ನಡದ ಉಳಿವು ಮತ್ತು ಬೆಳವಣಿಗೆಯ ಹೊಣೆಗಾರಿಕೆಯನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು. ಕನ್ನಡ ನಾಡು, ನುಡಿ, ನೆಲ ಹಾಗೂ ಸಂಸ್ಕೃತಿಯ ಕುರಿತಾದ ಅನೇಕ ಸಂರಕ್ಷಣೆಯಲ್ಲಿ ಯುವಜನತೆ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾಲೇಜಿನ ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ಮಾತನಾಡಿ ಕನ್ನಡವೆಂದರೆ ಕೇವಲ ಮಾತನಾಡುವ ಭಾಷೆಯಲ್ಲ, ಅದು ನಮ್ಮ ನೆಲದ ಇತಿಹಾಸ, ಜನಜೀವನ, ಆಚಾರ-ವಿಚಾರ, ಕಲೆ, ಸಾಹಿತ್ಯ, ಪರಂಪರೆ ಮತ್ತು ಸ್ವಾಭಿಮಾನದ ಸಂಕೇತ. ಕನ್ನಡದ ನೆಲ, ಭಾಷೆ ಹಾಗೂ ಸಂಸ್ಕೃತಿಯ ಸಂರಕ್ಷಣೆ ಕೇವಲ ಸರ್ಕಾರದ ಅಥವಾ ಸಂಘಟನೆಗಳ ಜವಾಬ್ದಾರಿಯಲ್ಲ. ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವೂ ಹೌದು ಎಂದು ತಿಳಿಸಿದರು. ಕನ್ನಡ ಉಳಿದರೆ ಸಂಸ್ಕೃತಿ ಉಳಿಯುತ್ತದೆ, ಸಂಸ್ಕೃತಿ ಉಳಿದರೆ ನಮ್ಮ ಅಸ್ಮಿತೆ ಉಳಿಯುತ್ತದೆ. ಕನ್ನಡ ವಿಭಾಗದ ಮುಖ್ಯಸ್ಥರಾದ ಶಿವಕುಮಾರ್, ಬೋಧಕ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ಕನ್ನಡ ಉಪನ್ಯಾಸಕ ಲಕ್ಷ್ಮಿಕಾಂತ್ ಸ್ವಾಗತಿಸಿ, ವಂದಿಸಿದರು.




By
ForthFocus™