ಉಡುಪಿ: ರಾಜ್ಯದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ರವ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ವರ್ಷಪೂರ್ತಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇದಕ್ಕಾಗಿ ಕಾರ್ಯಕ್ರಮಗಳ ಪಟ್ಟಿ ರೂಪಿಸುತ್ತಿದ್ದು, ಇದರಲ್ಲಿ ಕೋಟ ಶಿವರಾಮ ಕಾರಂತ ಥೀಂ ಪಾರ್ಕ್ ನಲ್ಲಿ ಸಹ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು. ಅವರು ಕೋಟದಲ್ಲಿನ ಶಿವರಾಮ ಕಾರಂತ ಥೀಂ ಪಾರ್ಕ್ ಗೆ ಭೇಟಿ ನೀಡಿ, ಶಿವರಾಮ ಕಾರಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.
ಶಿವರಾಮ ಕಾರಂತರದ್ದು ಚಲನಶೀಲ ವ್ಯಕ್ತಿತ್ವ, ಸಾಹಿತ್ಯದ ಎಲ್ಲಾ ಕ್ಷೇತ್ರಗಳಲ್ಲಿ ಅವರು ನಾಡಿಗೆ ನೀಡಿರುವ ಕೊಡುಗೆ ಅಪಾರವಾದುದು. ಅವರ ವ್ಯಕ್ತಿತ್ವ, ಚಿಂತನೆ, ಜೀವನ ಚೆರಿತ್ರೆ ಮುಂದಿನ ಪೀಳಿಗೆಗೆ ಸಾರುವ ಉದ್ದೇಶದಿಂದ ನಿರ್ಮಾಣಗೊಂಡಿರುವ ಥೀಂ ಪಾರ್ಕ್ ನ ಅಭಿವೃದ್ದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಸಚಿವ ಸುನೀಲ್ ಕುಮಾರ್ ಹೇಳಿದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ, ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷ ಅಜಿತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಕಾರಂತ ಥೀಂ ಪಾರ್ಕ್ ನ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ ಮತ್ತಿತರರು ಉಪಸ್ಥಿತರಿದ್ದರು.