ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನೆಹರು ಯುವ ಕೇಂದ್ರ ಹಾಗೂ ಪೂರ್ಣಪ್ರಜ್ಞ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಯುವ ಉತ್ಸವ-ಯುವ ಸಂವಾದ ಕಾರ್ಯಕ್ರಮವು ಅಕ್ಟೋಬರ್ 21 ರಂದು ಬೆಳಗ್ಗೆ 11 ಗಂಟೆಗೆ ನಗರದ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಕೆ ಅಕ್ಷಯ್ ಮಚ್ಚೀಂದ್ರ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಪೇಟಿಂಗ್, ಕವನ ಬರವಣಿಗೆ, ಮೊಬೈಲ್ ಫೋಟೋಗ್ರಾಫಿ, ಸಾಂಸ್ಕೃತಿಕ ಜಾನಪದ ಮತ್ತು ಸಾಂಪ್ರದಾಯಕ ನೃತ್ಯ, ಭಾಷಣ ಹಾಗೂ ಯುವ ಸಂವಾದ ಸ್ಪರ್ಧೆಗಳನ್ನು ಆಯೋಜಿಸಲಾಗುವುದು. ಜಿಲ್ಲಾಮಟ್ಟದ ಸ್ಪರ್ಧೆಯ ವಿಜೇತರು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.