ಮೈಸೂರು, ಜ.21: ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಟಿ.ನರಸೀಪುರ ತಾಲ್ಲೂಕಿನ ಕುಪ್ಯಾ ಗ್ರಾಮದಲ್ಲಿ ಆಯೋಜಿಸಿದ್ದ, “ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ನನ್ನ ಅಭಿವೃದ್ಧಿಪರವಾದ ಚಿಂತನೆಗಳಲ್ಲಿ ನಂಬಿಕೆಯನ್ನಿಟ್ಟು ಆಶೀರ್ವದಿಸಿದ ಕ್ಷೇತ್ರದ ಮತದಾರರಿಗೆ ಕೊಟ್ಟ ಮಾತಿನಂತೆ ನಡೆಯುವುದು ನನ್ನ ಧರ್ಮ. ಇಂದು ಕೋಟ್ಯಂತರ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಜನರ ಋಣಭಾರವನ್ನು ಸ್ವಲ್ಪ ಮಟ್ಟಿಗೆ ತಗ್ಗಿಸುವ ಪ್ರಯತ್ನ ಮಾಡಿದ್ದೇನೆ.
ವಿರೋಧ ಪಕ್ಷದವರು ನಮ್ಮ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ. ಎರಡುವರೆ ವರ್ಷಗಳಲ್ಲಿ ವರುಣಾದಲ್ಲಿ ರೂ.1,932 ಕೋಟಿಗಳನ್ನು ಕೇವಲ ಅಭಿವೃದ್ಧಿಗಾಗಿಯೇ ವೆಚ್ಚ ಮಾಡಲಾಗಿದೆ. ಖಜಾನೆ ಖಾಲಿಯಾಗಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ. ಮೈಸೂರು ಜಿಲ್ಲೆಯಲ್ಲಿ ಸುಮಾರು 10,000 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಇದೇ ರೀತಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಅಭಿವೃದ್ಧಿಗಾಗಿ ಸರ್ಕಾರ ಕ್ರಮ ಕೈಗೊಂಡಿದೆ. 1,15,000 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗಿದೆ. ವಿರೋಧ ಪಕ್ಷದವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಸಿಎಂ ಹೇಳಿದರು.
ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ಡಾ. ಶರಣಪ್ರಕಾಶ್ ಪಾಟೀಲ್, ಡಾ. ಎಂ.ಸಿ.ಸುಧಾಕರ್, ಸಂಸದರಾದ ಸುನಿಲ್ ಬೋಸ್, ವಿಧಾನ ಪರಿಷತ್ ಸದಸ್ಯರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಸೇರಿದಂತೆ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರುಗಳು, ವರುಣಾ ವಿಧಾನಸಭಾ ಕ್ಷೇತ್ರದ ಮುಖಂಡರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.




By
ForthFocus™