ಬೆಳಗಾವಿ: ಹೈಕಮಾಂಡ್ ನಿಂದ ಯಾವ ಸೂಚನೆ ಬರಬಹುದು, ಯಾರಿಗೆ ಸಿಎಂ ಪಟ್ಟ ಸಿಗುವುದು ಎಂಬಿತ್ಯಾದಿ ವಿಚಾರಗಳಿಗೆ ರೆಕ್ಕೆಪುಕ್ಕ ಬಂದು ರಾಜ್ಯದಲ್ಲಿ ಚರ್ಚೆಯ ವಿಷಯವಾಗಿರುವ ಬೆನ್ನಲ್ಲೇ, ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ಭಾನುವಾರ ಪ್ರವಾಹ ಪೀಡಿತ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.
ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಬೆಳಗಾವಿ ಜಿಲ್ಲೆಯ ಹಿರಣ್ಯಕೇಶಿ ನದಿಪಾತ್ರದ ವಿವಿಧ ಸ್ಥಳಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಶಂಕರಲಿಂಗ ಕಾರ್ಯಾಲಯದಲ್ಲಿ ಆರಂಭಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸಂತ್ರಸ್ತರ ಅಹವಾಲುಗಳನ್ನು ಆಲಿಸಿದರು.
ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕಂದಾಯ ಸಚಿವ ಆರ್.ಅಶೋಕ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಉಮೇಶ್ ಕತ್ತಿ ಮತ್ತಿತರರು ಉಪಸ್ಥಿತರಿದ್ದರು.