ಬಿಜೆಪಿಯ ಹಿರಿಯ ಶಾಸಕ ಸಿ.ಎಂ.ಉದಾಸಿ ಮಂಗಳವಾರ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಅವರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರು ಪತ್ನಿ, ಪುತ್ರ ಹಾಗೂ ಬಿಜೆಪಿ ಸಂಸದ ಶಿವಕುಮಾರ್ ಉದಾಸಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಆರು ಬಾರಿ ಅವರು ಶಾಸಕರಾಗಿ ಆಯ್ಕೆಯಾಗಿದ್ದರು. ೨೦೦೮ರಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ ಸಿ.ಎಂ.ಉದಾಸಿ, ತನ್ನ ಸರಳ ವ್ಯಕ್ತಿತ್ವದಿಂದ ಜನರಿಗೆ ಸದಾ ಲಭ್ಯವಾಗುತ್ತಿದ್ದರು. ಹಾನಗಲ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಉದಾಸಿ 1983 ರಲ್ಲಿ ಪಕ್ಷೇತರ ಶಾಸಕರಾಗಿ ವಿಧಾನಸೌಧ ಪ್ರವೇಶಿಸಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಉದಾಸಿ, 2004ರಲ್ಲಿ ಬಿಜೆಪಿ ಸೇರಿದ್ದರು.
ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿಯಾಗಿದ್ದ ಅವರು, ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದರು, ಲೋಕೋಪಯೋಗಿ ಸಚಿವರಾಗಿ ಅತ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ರಾಜ್ಯದಾದ್ಯಂತ ಜನಪ್ರಿಯತೆ ಪಡೆದುಕೊಂಡಿದ್ದರು. ಅವರ ನಿಧನದಿಂದ ಅಪರೂಪದ ನೇತಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ, ಭಗವಂತ ಅವರ ಕುಟುಂಬದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.