ಬೆಂಗಳೂರು, ಜು. 5: ರಾಜ್ಯದ ಅಂಗನವಾಡಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅವರಿಗೆ ಫಿಲ್ಟರ್ ನೀರು ಪೂರೈಕೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬುಧವಾರ ಸದನದಲ್ಲಿ ಬಂಗಾರಪೇಟೆ ಶಾಸಕರಾದ ನಾರಾಯಣಸ್ವಾಮಿ ಕೆ.ಎಂ. ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವೆ ಹೆಬ್ಬಾಳ್ಕರ್, ಬರುವ ಬಜೆಟ್ ನಲ್ಲಿ ಈ ಯೋಜನೆ ಅಳವಡಿಸಿಕೊಳ್ಳಲು ಮುಖ್ಯಮಂತ್ರಿಗಳಿಗೆ ಈಗಾಗಲೇ ಮನವಿ ಮಾಡಿಕೊಳ್ಳಲಾಗಿದೆ.
ಅನೇಕ ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾರ್ಯ ಅರ್ಧದಲ್ಲಿದ್ದು, ಅವುಗಳನ್ನು ಪೂರ್ತಿಗೊಳಿಸಲು ಹಾಗೂ ಅಂಗನವಾಡಿ ಮಕ್ಕಳಿಗೆ ಶೌಚಾಲಯ ವ್ಯವಸ್ಥೆ ಒದಗಿಸಿಕೊಡಲು ಕ್ರಮ ಕೈಗೊಳ್ಳಬೇಕು ಎಂಬ ಶಾಸಕ ನಾರಾಯಣಸ್ವಾಮಿ ಅವರ ಒತ್ತಾಯಕ್ಕೆ ಪ್ರತಿಕ್ರಿಯಿಸಲಾಗಿದ್ದು, ಆದಷ್ಟೂ ಶೀಘ್ರವೇ ಈ ಕುರಿತು ಕ್ರಮ ಕೈಗೊಳ್ಳಲಾಗುವುದು ಜತೆಗೆ ಸಂಬಂಧಪಟ್ಟ ಇಲಾಖೆಗೆ ಈ ಕುರಿತು ಸೂಚನೆ ನೀಡಲಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.