ಬೆಂಗಳೂರು, ಡಿ.21: ಕೇರಳ ಸಹಿತ ದೇಶದ ಕೆಲವೆಡೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಗುರುವಾರ ಸಭೆ ನಡೆಸಿದರು. ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಸಭೆಯ ಮುಖ್ಯಾಂಶಗಳು
* ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಆಮ್ಲಜನಕ, ವೆಂಟಿಲೇಟರ್‌ಗಳು, ಹಾಸಿಗೆಗಳು ಮತ್ತು ಲಸಿಕೆಗಳ ಲಭ್ಯತೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.
* ಗಡಿ ಪ್ರದೇಶಗಳಲ್ಲಿ ತಪಾಸಣೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು.
* ಬೆಂಗಳೂರಿನ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ್‌ಗಳನ್ನು ಸ್ಥಾಪಿಸುವುದು.
* ಕೋವಿಡ್ ಪರಿಸ್ಥಿತಿಯನ್ನು ಪತ್ತೆಹಚ್ಚಲು ಮತ್ತು ಮೇಲ್ವಿಚಾರಣೆ ಮಾಡಲು ಸಂಪುಟ ಉಪ ಸಮಿತಿಯನ್ನು ರಚನೆ
* ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧಗಳಿಲ್ಲ.
* ಜನಸಂದಣಿ ಇರುವ ಸ್ಥಳಗಳಲ್ಲಿ ಮಾಸ್ಕ್ ಧರಿಸಬೇಕು.
ಭಯಪಡುವ ಅಗತ್ಯವಿಲ್ಲ: ದಿನೇಶ್ ಗುಂಡೂರಾವ್
ಜೆಎನ್.1 ಒಮಿಕ್ರಾನ್ ನ ರೂಪಾಂತರಿಯಾಗಿದ್ದು, ವೇಗವಾಗಿ ಹರಡುತ್ತದೆ ಎಂಬುದು ಇತರ ರಾಷ್ಟ್ರಗಳಲ್ಲಿನ ಪರಿಸ್ಥಿತಿ ಅವಲೋಕಿಸಿದಾಗ ಕಂಡು ಬಂದಿದೆ. ಆದರೆ, ಅದು ಗಂಭೀರವಾಗಿಲ್ಲ, ಹೊಸ ಸಬ್‌ವೇರಿಯಂಟ್ ಅಪಾಯಕಾರಿ ಅಲ್ಲ ಎಂದು ವೈದ್ಯಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.