ಬೆಂಗಳೂರು: ಸಂಘರ್ಷದ ವಾತಾವರಣ ಹುಟ್ಟುಹಾಕಿದ್ದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಮಹತ್ವದ ತೀರ್ಪು ನಾಳೆ ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 10.30 ಕ್ಕೆ ತೀರ್ಪು ಪ್ರಕಟಿಸುವುದಾಗಿ ರಾಜ್ಯ ಹೈಕೋರ್ಟ್ ಹೇಳಿದೆ.
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹಾಗೂ ರಾಜ್ಯ ಸರ್ಕಾರ ಸಮವಸ್ತ್ರದ ಕುರಿತು ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್. ದೀಕ್ಷಿತ್ ಹಾಗೂ ನ್ಯಾ. ಖಾಜಿ ಜೈಬುನ್ನಿಸಾ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು.
ಹಿಜಾಬ್ ವಿವಾದ ಕುರಿತಂತೆ ಸಲ್ಲಿಕೆಯಾಗಿರುವ ಎಲ್ಲಾ ಅರ್ಜಿಗಳ ಕುರಿತ ಮುಂದಿನ ಆದೇಶವರೆಗೆ ಧರ್ಮ ಹಾಗೂ ನಂಬಿಕೆಯನ್ನು ಲೆಕ್ಕಿಸದೆ ಎಲ್ಲಾ ವಿದ್ಯಾರ್ಥಿಗಳು ತರಗತಿಯಲ್ಲಿ ಹಿಜಾಬ್, ಕೇಸರಿ ಶಾಲು, ಶಿರವಸ್ತ್ರ, ಧರಿಸುವುದನ್ನು ನಿರ್ಬಂಧಿಸಲಾಗಿದೆ. ಕಾಲೇಜು ಅಭಿವೃದ್ಧಿ ಸಮಿತಿಯು ವಿದ್ಯಾರ್ಥಿಗಳಿಗೆ ವಸ್ತ್ರ ಸಂಹಿತೆ ಮತ್ತು ಸಮವಸ್ತ್ರ ನಿಗದಿಪಡಿಸಿರುವ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಈ ಆದೇಶ ಸೀಮಿತಗೊಳಿಸಲಾಗಿದೆ ಎಂದು ಮಧ್ಯಂತರ ಆದೇಶವನ್ನು ನ್ಯಾಯಪೀಠ ಹೊರಡಿಸಿತ್ತು.
ಶಾಲಾ ಕಾಲೇಜುಗಳಿಗೆ ರಜೆ: ನಾಳೆ (ಮಾರ್ಚ್ 15) ದಕ್ಷಿಣ ಕನ್ನಡದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಬಾಹ್ಯ ಪರೀಕ್ಷೆಗಳು ವೇಳಾಪಟ್ಟಿಯಂತೆ ನಡೆಯುತ್ತವೆ. ಎಲ್ಲಾ ಶಾಲಾ-ಕಾಲೇಜುಗಳ ಆಂತರಿಕ ಪರೀಕ್ಷೆಗಳನ್ನು ಮುಂದೂಡಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಕೂಡ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು “ಉಡುಪಿ ಬುಲೆಟಿನ್” ಗೆ ಮಾಹಿತಿ ನೀಡಿದ್ದಾರೆ.