ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ದೇಶನದಂತೆ, ಇನ್ನು ಮುಂದೆ ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ.
ಇದು ಅನವಶ್ಯಕ ವೆಚ್ಚ ಎಂದು ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಸೂಚಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಇನ್ನು ಮುಂದೆ ಹೂ ಗುಚ್ಚದ ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು ಎಂದು ಹೇಳಿದ್ದಾರೆ.
ಇತ್ತೀಚೆಗೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್, ಅಭಿನಂದಿಸಲು ಹಾರದ ಬದಲಿಗೆ ಪುಸ್ತಕಗಳನ್ನೇ ನೀಡಿ ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.