ಬೆಂಗಳೂರು, ಸೆ.13: ವಿಧಾನಸೌಧ ಆವರಣದಲ್ಲಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆಗೊಳಿಸಿದರು. ಬೆಂಗಳೂರು ನಗರದ ಜನತೆಯ ಅನುಕೂಲಕ್ಕಾಗಿ ಮೊದಲ ಹಂತದಲ್ಲಿ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ರಾಜ್ಯ ಸರ್ಕಾರವು ರೂ.336 ಕೋಟಿ ವೆಚ್ಚದಲ್ಲಿ ಒಟ್ಟು 840 ಹೊಸ ಬಸ್‌ಗಳ ಖರೀದಿಗೆ ಒಪ್ಪಿಗೆ ನೀಡಿದೆ. ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ ಬಸ್ ಗಳನ್ನು ಬಿಎಂಟಿಸಿಗೆ ಸೇರ್ಪಡೆಗೊಳಿಸುವ ಜೊತೆಗೆ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದಲ್ಲದೆ, ನೂತನವಾಗಿ ಇನ್ನಷ್ಟು ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ. ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಚಿವರಾದ ಕೆ.ಜೆ ಜಾರ್ಜ್, ಜಮೀರ್ ಅಹ್ಮದ್, ಭೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್, ಎನ್.ಎ ಹ್ಯಾರಿಸ್, ಎಸ್.ಟಿ ಸೋಮಶೇಖರ್, ರಿಜ್ವಾನ್ ಅರ್ಷದ್, ಅಜಯ್ ಸಿಂಗ್, ನಾಗರಾಜ್ ಯಾದವ್ ಮುಂತಾದವರು ಉಪಸ್ಥಿತರಿದ್ದರು.