ಬೆಂಗಳೂರು, ಮೇ 7: ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಬುಧವಾರ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ನೆಲೆಗಳ ಮೇಲೆ ಭಾರತೀಯ ಸೈನ್ಯವು ನಡೆಸಿದ ಯಶಸ್ವಿ ದಾಳಿಯ ಕುರಿತು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ ಕಲಿಸಿದ ಪಾಠ ಮಾತ್ರವಲ್ಲ, ಈ ಉಗ್ರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ಧ ಅವರನ್ನು ಛೂಬಿಡುತ್ತಿದ್ದ ಪಾಕಿಸ್ಥಾನಕ್ಕೂ ನೀಡಿರುವ ಎಚ್ಚರಿಕೆ ಆಗಿದೆ. ಉಗ್ರಗಾಮಿಗಳ ನೆಲೆಯನ್ನೇ ಕೇಂದ್ರವಾಗಿಟ್ಟುಕೊಂಡು ಅಮಾಯಕ ಜನರ ಸಾವು-ನೋವು ನಡೆಯದಂತೆ ದಾಳಿ ನಡೆಸಿರುವ ನಮ್ಮ ಸೈನಿಕರ ಕಾರ್ಯಕ್ಷಮತೆ ಮತ್ತು ಪರಿಣತಿಗೆ ನನ್ನದೊಂದು ದೊಡ್ಡ ಸಲಾಮ್. ಭಾರತ ಸರ್ಕಾರ ಕೈಗೊಂಡಿರುವ ಈ ನಿರ್ಧಾರವನ್ನು ನಮ್ಮ ಪಕ್ಷ ಸಂಪೂರ್ಣ ಬೆಂಬಲಿಸಿದೆ. ನಾನು ಕೂಡಾ ನಮ್ಮ ಸರ್ಕಾರ ಮತ್ತು ರಾಜ್ಯದ ಪರವಾಗಿ ಸಂಪೂರ್ಣ ಬೆಂಬಲ ಘೋಷಿಸುತ್ತಿದ್ದೇನೆ.
ನಾವು ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದೇವೆ. ರಾಜ್ಯದಲ್ಲಿ ಸುರಕ್ಷತೆಯ ಕುರಿತು ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಇದು ಪಾಕಿಸ್ಥಾನಕ್ಕೆ ಮಾತ್ರವಲ್ಲ ಭಾರತದ ಜೊತೆ ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಕೂಡಾ ಇಂದಿನ ಸೇನಾದಾಳಿ ಎಚ್ಚರಿಕೆಯ ಗಂಟೆಯಾಗಿದೆ ಎಂದು ಸಿಎಂ ಹೇಳಿದ್ದಾರೆ.




By
ForthFocus™