ಬೆಂಗಳೂರು: ಪಿಎಸ್‌ಐ ನೇಮಕಾತಿಯಲ್ಲಿ ಸುಮಾರು 1,29,000 ಜನ ಅರ್ಜಿ ಹಾಕಿದ್ದಾರೆ. ಅದರಲ್ಲಿ 57,000 ಜನರಿಗೆ ಪರೀಕ್ಷೆಗೆ ಅರ್ಹರು ಎಂದು ಪರೀಕ್ಷೆ ಬರೆಯಲು ಕರೆದಿದ್ದರು. ಅದರಲ್ಲಿ 545 ಜನರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ಮಾಡಿದ್ದಾರೆ. ಇದರಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸರ್ಕಾರವೇ ಒಪ್ಪಿಕೊಂಡು ಪರೀಕ್ಷೆ ರದ್ದು ಮಾಡಿ, ಮರು ಪರೀಕ್ಷೆ ಮಾಡುವುದಾಗಿ ಹೇಳಿದೆ.
ಈ ನೇಮಕಾತಿ ಸಮಿತಿಯ ನೇತೃತ್ವ ವಹಿಸಿದ್ದ ಅಮೃತ್ ಪೌಲ್ ಎಂಬ (ಎಡಿಜಿಪಿ) ಹಿರಿಯ ಪೊಲೀಸ್ ಅಧಿಕಾರಿಯನ್ನು ಸರ್ಕಾರ ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಿದೆ. ಇನ್ನೊಬ್ಬರು ಶಾಂತ ಕುಮಾರ್ ಎಂಬ ಡಿವೈಎಸ್‌ಪಿ ಅವರನ್ನು ಬೇರೆ ಕಡೆಗೆ ವರ್ಗಾವಣೆ ಮಾಡಿದ್ದಾರೆ.
ಇದರಿಂದ ಈ ಇಬ್ಬರೂ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಅಕ್ರಮದಲ್ಲಿ ಶಾಮೀಲಾದ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ, ಅಮಾನತ್ತು ಮಾಡಬೇಕಿತ್ತು. ರಾಜಕಾರಣಿಗಳು, ಅಧಿಕಾರಿಗಳು, ಸರ್ಕಾರ ಭಾಗಿಯಾಗದೆ ಇಂಥದ್ದೊಂದು ಭ್ರಷ್ಟಾಚಾರ ಮಾಡಲು ಸಾಧ್ಯವಾಗಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.