ಬೆಳಗಾವಿ: ಬಲವಂತವಾಗಿ, ಆಸೆ ಆಮಿಷ ಒಡ್ಡಿ ಅಥವಾ ಮೋಸದಿಂದ ಮತಾಂತರ ಮಾಡಿದರೆ ಅದು ಶಿಕ್ಷಾರ್ಹ ಅಪರಾಧ ಎಂದು ನಮ್ಮ ಸಂವಿಧಾನದಲ್ಲೇ ಸ್ಪಷ್ಟವಾಗಿ ಇರುವುದರಿಂದ ರಾಜ್ಯ ಸರ್ಕಾರದ ನೂತನ ಮತಾಂತರ ನಿಷೇಧ ಕಾಯ್ದೆಯ ಅಗತ್ಯವೇನಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.
ನಮ್ಮ ಸರ್ಕಾರದ ಅವಧಿಯಲ್ಲಿ ಮತಾಂತರ ನಿಷೇಧ ಕಾಯ್ದೆಯ ಕರಡು ಸಂಪುಟದಲ್ಲಿ ಚರ್ಚೆಯೂ ಆಗಿಲ್ಲ, ಅನುಮೋದನೆಯೂ ಆಗಿಲ್ಲ. ಕೇವಲ ಸಂಪುಟದ ಚರ್ಚೆಗೆ ತನ್ನಿ ಎಂದು ಸಹಿ ಹಾಕಿದ ಕಡತಗಳೆಲ್ಲವೂ ಸರ್ಕಾರದ ನಿಲುವು ಆಗುವುದಿಲ್ಲ.
ಸಂಸದೀಯ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ಎಂದರೆ ಸಮಾನರಲ್ಲಿ ಮೊದಲಿಗ ಎಂಬ ವ್ಯಾಖ್ಯಾನವಿದೆ. ಮುಖ್ಯಮಂತ್ರಿಯಾಗಿ ನಾನೊಬ್ಬನೇ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲು ಬರಲ್ಲ, ಕರಡು ಪ್ರತಿ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿ ಎಂಬ ಕಾರಣಕ್ಕೆ ಸಹಿ ಮಾಡಿದ್ದೆ. ಸಹಿ ಮಾಡಿದ ಮಾತ್ರಕ್ಕೆ ಒಪ್ಪಿದ್ದೆ ಎಂದಲ್ಲ.
ನಾನು ಮತಾಂತರ ನಿಷೇಧ ಕಾಯಿದೆಯ ಕಡತವನ್ನು ಸಂಪುಟದ ಮುಂದೆ ತರುವಂತೆ ಸಹಿ ಹಾಕಿದ್ದು 2015 ರ ನವೆಂಬರ್ ತಿಂಗಳಿನಲ್ಲಿ. ಅದಾಗಿ ಎರಡೂವರೆ ವರ್ಷ ನಾವು ಅಧಿಕಾರದಲ್ಲಿ ಇದ್ದರೂ ಒಮ್ಮೆಯೂ ಅದನ್ನು ಸಂಪುಟದ ಮುಂದೆ ತರುವ ಪ್ರಯತ್ನ ಮಾಡಲಿಲ್ಲ.
ಕಾರಣ ನಮ್ಮ ಸರ್ಕಾರಕ್ಕೆ ಇಂಥಾ ಮಸೂದೆಯ ಬಗ್ಗೆ ಆಸಕ್ತಿ ಇರಲಿಲ್ಲ. ಕಾಯ್ದೆಯು ಕಾನೂನಿನ ನಿಯಮಗಳಿಗೆ ವಿರುದ್ಧವಾಗಿದೆ. ಗುಜರಾತ್, ಉತ್ತರ ಪ್ರದೇಶ ಸರ್ಕಾರಗಳ ಮತಾಂತರ ನಿಷೇಧ ಕಾಯ್ದೆಯಲ್ಲಿ ಬಳಕೆ ಮಾಡಿರುವ ಪದಗಳು, ವಾಕ್ಯಗಳೇ ಇಲ್ಲಿಯೂ ಯಥಾವತ್ತಾಗಿವೆ.
ಈ ಎಲ್ಲಾ ಸರ್ಕಾರಗಳ ಕರಡು ತಯಾರಿಕೆಯ ಹಿಂದೆ ಯಾವುದೋ ಒಂದು ಕಾಣದ ಕೈ ಇದೆ ಎಂಬ ಅನುಮಾನ ನನಗಿದೆ. ಅದು ಯಾವುದು ಎಂದು ಸರ್ಕಾರವೇ ಬಹಿರಂಗಪಡಿಸಬೇಕು.
ಬಲವಂತದಿಂದ, ಆಸೆ ಆಮಿಷ ಒಡ್ಡಿ, ಹೆದರಿಸಿ ಬೆದರಿಸಿ, ಮೋಸದ ಮೂಲಕ ಮತಾಂತರ ಮಾಡುವುದನ್ನು ನಾನು ವಿರೋಧಿಸುತ್ತೇನೆ. ಇದರ ಜೊತೆಗೆ ಜಾತೀಯತೆ, ಅಸ್ಪೃಶ್ಯತೆ ಅನುಸರಿಸುತ್ತಿರುವವರಿಗೂ ಕಠಿಣ ಶಿಕ್ಷೆಯಾಗಬೇಕು ಎಂಬುದು ನನ್ನ ಒತ್ತಾಯ.
ಮತಾಂತರವನ್ನು ದೂಷಿಸುವ ಬದಲು, ಮತಾಂತರವಾಗಲು ನಮ್ಮಲ್ಲಿರುವ ದೋಷಗಳೇನು ಎಂಬುದನ್ನು ಗುರುತಿಸಿ ಸರಿಪಡಿಸುವ ಕೆಲಸವನ್ನು ಮಾಡಬೇಕು ಎಂದು ಮಹಾತ್ಮ ಗಾಂಧಿ, ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಇದು ನಿಜವಾಗಿ ಈಗ ನಾವು ಮಾಡಲೇಬೇಕಾದ ಕೆಲಸ.
ವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿರುವ ಈ ಕಾಯ್ದೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಕೂಡಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಸಿದ್ಧರಾಮಯ್ಯ ಒತ್ತಾಯ ಮಾಡಿದ್ದಾರೆ.