ಬೆಂಗಳೂರು, ಅ.8: ಅತ್ತಿಬೆಲೆ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದೆ. ಅತ್ತಿಬೆಲೆ ಗಡಿಯ ಆನೆಕಲ್ ನಗರದ ಪಟಾಕಿ ದಾಸ್ತಾನು ಮಳಿಗೆಯಲ್ಲಿ ಶನಿವಾರ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ.
ಅವರು ಶನಿವಾರ ರಾತ್ರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು ಬಳಿಕ ಪರಿಹಾರ ಘೋಷಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಘಟನೆಯ ಕುರಿತು ಮುಖ್ಯಮಂತ್ರಿಗಳ ಜತೆ ಮಾತನಾಡಿದ್ದೇನೆ. ಬೆಂಕಿ ಅವಘಡದಲ್ಲಿ 13 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಘಟನೆಯ ಕುರಿತು ತನಿಖೆಗೆ ಆದೇಶ ನೀಡಿದ್ದೇವೆ. ಪರವಾನಿಗೆ ನಿಯಮ ಗಾಳಿ ತೂರಲಾಗಿದೆಯೇ ಎಂಬ ಸಂಶಯ ಇದೆ. ತನಿಖೆಯ ನಂತರ ಎಲ್ಲವೂ ಸ್ಪಷ್ಟವಾಗಲಿದೆ ಎಂದರು.
ಏನಾಗಿತ್ತು?: ಆನೇಕಲ್ ಬಳಿಯ ಪಟಾಕಿ ದಾಸ್ತಾನು ಮಳಿಗೆಯಲ್ಲಿ ಶನಿವಾರ ಮಧ್ಯಾಹ್ನ ದಿಢೀರನೆ ಬೆಂಕಿ ಕಾಣಿಸಿಕೊಂಡಿತು. ರಾಷ್ಟ್ರೀಯ ಹೆದ್ದಾರಿಯ ಸನಿಹವೇ ಈ ಪಟಾಕಿ ಮಳಿಗೆ ಇದ್ದ ಕಾರಣ, ಮಳಿಗೆಯ ಹತ್ತಿರದಲ್ಲಿದ್ದ ದಾಸ್ತಾನು ಮಳಿಗೆಗೂ ಬೆಂಕಿ ಆವರಿಸಿತು. ಘಟನೆಯಲ್ಲಿ 12 ಮಂದಿ ಸಾವನ್ನಪ್ಪಿದ್ದು, 7 ದ್ವಿಚಕ್ರ ವಾಹನ, ಕಂಟೇನರ್ ಲಾರಿ ಮತ್ತು ಮೂರು ಇತರ ವಾಹನಗಳು ಬೆಂಕಿಗೆ ಆಹುತಿಯಾಗಿವೆ.