ಬೆಂಗಳೂರು: ರಾಜ್ಯದಲ್ಲಿ ಐಎಎಸ್ ಅಧಿಕಾರಿಗಳ ವರ್ಗಾವಣೆ ಪರ್ವ ಆರಂಭವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಮೈಸೂರು, ಮಂಡ್ಯ, ಜಿಲ್ಲಾಧಿಕಾರಿಗಳು ಸೇರಿದಂತೆ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉತ್ತರ ಕನ್ನಡ, ಚಾಮರಾಜನಗರ, ಮೈಸೂರು, ಮಂಡ್ಯ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಬದಲಾವಣೆಯಾಗಿದೆ. ಅನಿಲ್ ಕುಮಾರ್ ಟಿ.ಕೆ, ಡಾ. ಪ್ರಸಾದ್ ಎನ್.ವಿ, ಜಯರಾಂ ಎನ್, ಡಾ. ಕುಮಾರ ಅವರಿಗೆ ಹೆಚ್ಚುವರಿ ಹೊಣೆ ನೀಡಲಾಗಿದೆ.
ದಕ್ಷಿಣ ಜಿಲ್ಲಾಧಿಕಾರಿಯಾಗಿದ್ದ ಡಾ. ರಾಜೇಂದ್ರ ಕೆ.ವಿ., ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಬಗಾದಿ ಗೌತಮ್ ವರ್ಗಾವಣೆಯಾಗಿದ್ದು, ಮೈಸೂರಿನ ಜಿಲ್ಲಾಧಿಕಾರಿಯಾಗಿ ಡಾ. ರಾಜೇಂದ್ರ ಕೆ.ವಿ ನೇಮಕಗೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಹಿಲನ್ ಕ್ರೀಡಾ ಇಲಾಖೆಗೆ ವರ್ಗಾವಣೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿ.ಪಂ. ಸಿಇಒ ಆಗಿರುವ ಡಾ. ಕುಮಾರ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಹೆಚ್ಚುವರಿ ಹೊಣೆ ನೀಡಲಾಗಿದೆ.
ಚಾಮರಾಜನಗರ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ತನ್ಮೂಲಕ ಒಂದೇ ವರ್ಷದೊಳಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ವರ್ಗಾವಣೆಯಾಗಿದ್ದಾರೆ. ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ಡಿ.ಎಸ್.ರಮೇಶ್ ನೇಮಕವಾಗಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದ ಡಿ.ಎಸ್.ರಮೇಶ್ ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದಾರೆ. ಚಾರುಲತಾ ಸೋಮಲ್ ಅವರು 2021ರ ನ. 16ರಿಂದ ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ಸೇವೆ ಆರಂಭಿಸಿದ್ದರು.