ನವದೆಹಲಿ, ಡಿ.6: ಈಗಾಗಲೇ ಸಂಸದರಾಗಿರುವ 10 ಮಂದಿ ಬಿಜೆಪಿ ಸಂಸದರು ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲೂ ಸ್ಪರ್ಧಿಸಿ ಗೆಲುವನ್ನು ಸಾಧಿಸಿದ್ದರು. ರಾಜ್ಯ ರಾಜಕಾರಣಕ್ಕೆ ಮರಳಲು ತಮ್ಮ ಸಂಸದ ಸ್ಥಾನಕ್ಕೆ 10 ಮಂದಿ ಬಿಜೆಪಿ ಸಂಸದರು ಬುಧವಾರ ತಮ್ಮ ಲೋಕಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಸಂಸದರ ನಿಯೋಗ ಸ್ಪೀಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿತು.
ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನರೇಂದ್ರ ತೋಮರ್, ಪ್ರಹ್ಲಾದ್ ಪಟೇಲ್, ರಿತಿ ಪಾಠಕ್, ರಾಕೇಶ್ ಸಿಂಗ್, ಉದಯ್ ಪ್ರತಾಪ್ ಸಿಂಗ್, ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿರುವ ರಾಜ್ಯವರ್ಧನ್ ರಾಥೋಡ್, ಕಿರೋಡಿ ಲಾಲ್ ಮೀನಾ ಮತ್ತು ದಿಯಾ ಕುಮಾರಿ, ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯಲ್ಲಿ ಜಯಶಾಲಿಯಾದ ಅರುಣ್ ಸಾವೊ ಮತ್ತು ಗೋಮತಿ ಸಾಯಿ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಛತ್ತೀಸ್‌ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚಿಸಲು ಸಿದ್ಧವಾಗಿದೆ.