ನವದೆಹಲಿ: ಬೆಲೆ ಏರಿಕೆಯ ಬಿಸಿ ಅನುಭವಿಸುತ್ತಿರುವ ದೇಶದ ಜನತೆಗೆ ಕೇಂದ್ರ ಸರಕಾರ ಸ್ವಲ್ಪ ಮಟ್ಟಿನ ರಿಲೀಫ್ ನೀಡಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಪ್ರತಿ ಲೀಟರ್ ಗೆ ರೂ.8, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ರೂ. 6 ರಷ್ಟು ಕಡಿತಗೊಳಿಸಿದೆ.
ಈ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆ ನೀಡಿದ್ದು, ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ನಾವು ಪ್ರತಿ ಲೀಟರ್ಗೆ 8 ರೂ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 6 ರೂ.ಗಳಷ್ಟು ಕಡಿಮೆ ಮಾಡುತ್ತಿದ್ದೇವೆ. ಇದರಿಂದ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 9.5 ರೂ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 7 ರೂ.ಗಳಷ್ಟು ಕಡಿಮೆಯಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಸಿಲಿಂಡರ್ಗೆ 12 ಸಿಲಿಂಡರ್ ವರೆಗೆ 200 ರೂ.ಗಳ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕಳೆದ ದೀಪಾವಳಿ ಸಂದರ್ಭದಲ್ಲಿ (ನವೆಂಬರ್) ಪೆಟ್ರೋಲ್ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರಕಾರ ಕಡಿಮೆ ಮಾಡಿದನ್ನು ಇಲ್ಲಿ ಸ್ಮರಿಸಬಹುದು.