ನವದೆಹಲಿ, ಜೂ.5: ಎನ್‌ಡಿಎ ನಾಯಕರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ತಮ್ಮ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ಬುಧವಾರ ನಡೆದ ಎನ್‌ಡಿಎ ನಾಯಕರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಕಳೆದ ಹತ್ತು ವರ್ಷಗಳಲ್ಲಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಅವಧಿಯಲ್ಲಿ ಭಾರತವು ಪ್ರತಿಯೊಂದು ಕ್ಷೇತ್ರದಲ್ಲೂ ಸರ್ವತೋಮುಖ ಅಭಿವೃದ್ಧಿಯನ್ನು ಕಂಡಿದೆ ಎಂಬ ನಿರ್ಣಯವನ್ನು ಅಂಗೀಕರಿಸಲಾಯಿತು. ದೇಶದ ಜನತೆ ಆರು ದಶಕಗಳ ನಂತರ ಸತತ ಮೂರನೇ ಬಾರಿಗೆ ಸಂಪೂರ್ಣ ಬಹುಮತದೊಂದಿಗೆ ಬಲಿಷ್ಠ ನಾಯಕತ್ವವನ್ನು ಆಯ್ಕೆ ಮಾಡಿದ್ದಾರೆ ಎಂದೂ ನಿರ್ಣಯದಲ್ಲಿ ಹೇಳಲಾಗಿದೆ. ಸತತ ಮೂರನೇ ಸರ್ಕಾರಕ್ಕೆ ಇದೊಂದು ಐತಿಹಾಸಿಕ ಜನಾದೇಶ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಭೆಯಲ್ಲಿ, ಎನ್‌ಡಿಎ ಸರ್ಕಾರವು ದೇಶದ ಸರ್ವತೋಮುಖ ಅಭಿವೃದ್ಧಿಗೆ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದು ಸರ್ವಾನುಮತದಿಂದ ನಿರ್ಧರಿಸಲಾಯಿತು. ವಿಕಸಿತ್ ಭಾರತ್ ಬಗ್ಗೆ ಮೋದಿ ಅವರಿಗೆ ಸ್ಪಷ್ಟ ದೃಷ್ಟಿ ಇದೆ ಎಂದು ಎನ್‌ಡಿಎ ಮಿತ್ರ ಪಕ್ಷಗಳ ನಾಯಕರು ಹೇಳಿದ್ದಾರೆ. ವಿಶ್ವದಲ್ಲಿ ಭಾರತದ ಹೆಮ್ಮೆಯನ್ನು ಹೆಚ್ಚಿಸುವಲ್ಲಿ ಪ್ರಧಾನ ಮಂತ್ರಿಯವರ ಪಾತ್ರವನ್ನು ನಾಯಕರು ಶ್ಲಾಘಿಸಿದರು. ಬಡತನ ನಿರ್ಮೂಲನೆಗೆ ಅವರ ಪ್ರಯತ್ನವನ್ನು ಶ್ಲಾಘಿಸಿದರು.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ, ತೆಲುಗು ದೇಶಂ ಪಕ್ಷದ ಮುಖ್ಯಸ್ಥ, ಎನ್ ಚಂದ್ರಬಾಬು ನಾಯ್ಡು, ಜನತಾ ದಳ (ಯುನೈಟೆಡ್) ಮುಖ್ಯಸ್ಥ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಶಿವಸೇನೆ (ಶಿಂಧೆ ಗುಂಪು) ನಾಯಕ ಮತ್ತು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ಲೋಕ ಜನಶಕ್ತಿ ಪಕ್ಷದ (ರಾಮ್ವಿಲಾಸ್) ಮುಖ್ಯಸ್ಥ, ಚಿರಾಗ್ ಪಾಸ್ವಾನ್, ಅಪ್ನಾ ದಳದ ನಾಯಕಿ ಅನುಪ್ರಿಯಾ ಪಟೇಲ್, ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್ ಚೌಧರಿ, ಜೆಡಿ(ಎಸ್) ಎಚ್ ಡಿ ಕುಮಾರಸ್ವಾಮಿ, ಹಿಂದೂಸ್ತಾನಿ ಅವಾಮಿ ಮೋರ್ಚಾ ಮುಖ್ಯಸ್ಥ ಜಿತನ್ ರಾಮ್ ಮಾಂಝಿ, ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಮತ್ತು ಎನ್‌ಡಿಎ ಘಟಕಗಳ ಇತರ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.