ನವದೆಹಲಿ: 250 ವರ್ಷಗಳ ಕಾಲ ನಮ್ಮ ದೇಶವನ್ನು ಆಳ್ವಿಕೆ ಮಾಡಿದ ಯುನೈಟೆಡ್ ಕಿಂಗ್ಡಮ್ ನ್ನು ಮೀರಿಸಿ ಭಾರತ ವಿಶ್ವದ 5ನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಶಿಕ್ಷಕರ ದಿನಾಚರಣೆ ಪ್ರಯುಕ್ತ ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕರ ಜೊತೆಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಿಕ್ಷಕರಿಗೆ ಸಕಾರಾತ್ಮಕತೆಯ ಶಕ್ತಿ ಇದೆ, ಅವರು ಯಾವಾಗಲೂ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳನ್ನು ಪ್ರೇರೇಪಿಸುತ್ತಾರೆ. ಇದು ವಿದ್ಯಾರ್ಥಿಗಳಿಗೆ ಪ್ರತಿಯೊಂದು ಸವಾಲನ್ನು ಎದುರಿಸಲು ಸಹಾಯ ಮಾಡುತ್ತದೆ. ನಿಜವಾದ ಶಿಕ್ಷಕರು ವಿದ್ಯಾರ್ಥಿಗಳನ್ನು ಕನಸು ಕಾಣಲು, ಸಾಧಿಸಲು ಪ್ರೇರೇಪಿಸುತ್ತಾರೆ. 2047ರ ವೇಳೆಗೆ ಭಾರತ ಹೇಗಿರಬೇಕು ಎಂಬುದನ್ನು ನಿರ್ಧರಿಸುವ ಯುವಕರನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದರು.
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿಶ್ವದಾದ್ಯಂತ ಶ್ಲಾಘಿಸಲಾಗುತ್ತಿದೆ. ಭಾರತವು ತನ್ನ ಶಿಕ್ಷಣ ಪರಿಸರ ವ್ಯವಸ್ಥೆಯನ್ನು ಬಲಪಡಿಸಲು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸುವಲ್ಲಿ ಶಿಕ್ಷಕರು ದೊಡ್ಡ ಪಾತ್ರ ವಹಿಸಿದ್ದಾರೆ. ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದು ಮಾತ್ರವಲ್ಲದೆ ಅವರ ಜೀವನವನ್ನು ಪರಿವರ್ತಿಸುವ ಅಗತ್ಯವನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು.